×
Ad

ಬಿಎಸ್‍ವೈ ಭೇಟಿ ಮಾಡಿ ಅಚ್ಚರಿ ಮೂಡಿಸಿದ ವಿ.ಸೋಮಣ್ಣ

Update: 2024-03-02 20:38 IST

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನಪ್ಪಿದ ಬಳಿಕ ಸಕ್ರಿಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ವಿ.ಸೋಮಣ್ಣ, ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭಾ ಚುನಾವಣಾ ಹೊಸ್ತಿಲಿನಲ್ಲೇ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿಎಸ್‍ವೈ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರು ಸಂಸದ ಜಿ.ಎಸ್.ಬಸವರಾಜ ಅವರೊಂದಿಗೆ ತೆರಳಿದ ವಿ.ಸೋಮಣ್ಣ, ವೈಮನಸ್ಸು ಬದಿಗಿಟ್ಟು ಮಾತುಕತೆ ನಡೆಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಇದೀಗ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿರುವ ಸೋಮಣ್ಣ, ಯಡಿಯೂರಪ್ಪ ಭೇಟಿಗೆ ವಿಶೇಷ ಮಹತ್ವವಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೊದಲು ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ, ವಿಜಯೇಂದ್ರರನ್ನು ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಸಲು ಬಿಎಸ್‍ವೈ ಬಯಸಿದ್ದರು. ಈ ಕುರಿತು ಹೈಕಮಾಂಡ್ ಮನವೋಲಿಸುವಲ್ಲಿ ಸಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ವಿ.ಸೋಮಣ್ಣ ಅವರನ್ನು ಸಿದ್ದರಾಮಯ್ಯ ವಿರುದ್ದ ಕಣಕ್ಕಿಳಿಸಲಾಗಿತ್ತು. ಸೋಲುಂಡ ಸೋಮಣ್ಣನವರು ಸ್ವಪಕ್ಷದವರ ವಿರುದ್ದವೇ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News