ರಸಗೊಬ್ಬರ ವಿಚಾರದಲ್ಲಿ ಪೂರ್ವ ತಯಾರಿ ಮಾಡಿಕೊಳ್ಳದ ರಾಜ್ಯ ಸರಕಾರ : ವಿಜಯೇಂದ್ರ ಟೀಕೆ
ಬೆಂಗಳೂರು : ರಾಜ್ಯ ಸರಕಾರವು ರಸಗೊಬ್ಬರ ವಿಚಾರದಲ್ಲಿ ಪೂರ್ವ ತಯಾರಿ ಮಾಡಿಲ್ಲ. ತೊಗರಿ ಬೆಳೆಯುವ ಗುಲ್ಬರ್ಗ, ಬೇರೆ ಬೇರೆ ಬೆಳೆ ಬೆಳೆಯುವ ಗದಗ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ರಸಗೊಬ್ಬರ ಬೇಕೆಂಬ ಪೂರ್ವಾಪರ ಲೆಕ್ಕಾಚಾರ ಇಲ್ಲದಿರುವುದರಿಂದ ರೈತರಿಗೆ ಆತಂಕದ ಸ್ಥಿತಿ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಪ್ಪಟ್ಟು ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟವಾಗುತ್ತಿದೆ. ಕಳ್ಳದಂಧೆಯೂ ನಡೆಯುತ್ತಿದೆ. ಕಾಂಗ್ರೆಸ್ ಸರಕಾರಗಳ ಆಡಳಿತದಲ್ಲಿ ದಲ್ಲಾಳಿಗಳ ಕಾಟವನ್ನು ಹಿಂದಿನಿಂದಲೂ ನೋಡುತ್ತ ಬಂದಿದ್ದೇವೆ. ರಸಗೊಬ್ಬರದ ವಿಷಯದಲ್ಲಿ ಕೃತಕ ಅಭಾವ ಸೃಷ್ಟಿ ಆಗಿದೆ ಎಂದು ದೂರಿದರು.
ರಾಜ್ಯ ಸರಕಾರ ರೈತರಿಗೆ ಅನ್ಯಾಯ ಮಾಡುತ್ತಿದ್ದು, ಇದರ ಸಂಬಂಧ ಬಿಜೆಪಿ ಹೋರಾಟ ಮಾಡಲಿದೆ. ರಸಗೊಬ್ಬರ ದಾಸ್ತಾನಿದೆ ಕೊರತೆ ಇಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಹಾಗಿದ್ದೂ ರೈತರ ಹೋರಾಟ ಮುಂದುವರೆದಿದ್ದರೆ, ಇದರ ಹಿಂದೆ ರಾಜ್ಯ ಸರಕಾರದ ವೈಫಲ್ಯ ಎದ್ದು ಕಾಣುತ್ತಿದೆ. ರೈತರಿಗೆ ತೊಂದರೆ ಆಗದ ರೀತಿಯಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಮುಖ್ಯಮಂತ್ರಿ ನಿನ್ನೆ ರಾಜ್ಯದ ರಸಗೊಬ್ಬರ ಸಂಬಂಧ ಕೇಂದ್ರ ಸಚಿವ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಈ ಬಾರಿ ಮುಂಗಾರು 20-25 ದಿನಗಳ ಮುಂಚಿತವಾಗಿ ಪ್ರಾರಂಭವಾಗಿದೆ. ಹವಾಮಾನ ಇಲಾಖೆ ಇದರ ಸ್ಪಷ್ಟ ಮುನ್ಸೂಚನೆ ನೀಡಿದ್ದರೂ ರಾಜ್ಯ ಸರಕಾರ, ಕೃಷಿ ಸಚಿವರು ಪೂರ್ವ ತಯಾರಿ ಮಾಡದ ಕಾರಣ ರೈತರು ಬೀದಿಗಿಳಿದು ಹೋರಾಟ ಪ್ರಾರಂಭಿಸುವಂತಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಜುಲೈ ಅಂತ್ಯಕ್ಕೆ ಕೇಂದ್ರದಿಂದ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ರಾಜ್ಯಕ್ಕೆ ಬಂದಿದೆ. ನಮ್ಮ ನಿರೀಕ್ಷೆ ಇದ್ದುದು 6.31 ಲಕ್ಷ ಮೆ.ಟನ್. ರಾಜ್ಯ ಸರಕಾರದ ಅಪೇಕ್ಷೆ ಮೀರಿ ರಸಗೊಬ್ಬರ ರಾಜ್ಯಕ್ಕೆ ಬಂದಿದೆ ಎಂದು ವಿಜಯೇಂದ್ರ ಹೇಳಿದರು.
ಬೆಂಗಳೂರಿನ ಸಮಸ್ಯೆಗಳ ಚರ್ಚೆ: ಬೆಂಗಳೂರಿನ ಬಿಜೆಪಿಯ ಎಲ್ಲ ಹಿರಿಯ ಶಾಸಕರು ಕುಳಿತು ಈ ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯ ಸರಕಾರ, ಮುಖ್ಯಮಂತ್ರಿ, ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನಗರದ ಅಭಿವೃದ್ಧಿ ವಿಚಾರದಲ್ಲಿ ವೈಜ್ಞಾನಿಕವಾಗಿ ಆಲೋಚಿಸುತ್ತಿಲ್ಲ. ಭೂಗತ ಟನೆಲ್ ರಸ್ತೆ, ಬಿಬಿಎಂಪಿಯನ್ನು 5 ವಿಭಾಗವಾಗಿ ಮಾಡುವ ಅವೈಜ್ಞಾನಿಕ ತೀರ್ಮಾನವು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದು ಅವರು ಟೀಕಿಸಿದರು.
ಮುಂಬೈ ಮತ್ತಿತರ ಮಹಾನಗರಗಳಲ್ಲಿ ಇಂಥಹ ಪ್ರಯೋಗ ಮಾಡಿ ಅವೆಲ್ಲವೂ ವಿಫಲವಾಗಿವೆ. ಭೂಗತ ಟನೆಲ್ ರಸ್ತೆಯ ಸಾಧಕ ಬಾಧಕವನ್ನು ಚರ್ಚೆ ಮಾಡದೆ, ಆತುರಾತುರವಾಗಿ ಟೆಂಡರ್ ಕರೆಯಲು ಹೊರಟಿದ್ದು ಖಂಡಿತ ಸರಿಯಲ್ಲ. ಇದರ ಹಿಂದೆ ಅಭಿವೃದ್ಧಿಯ ಚಿಂತನೆ ಇದೆಯೆ ಅಥವಾ ಬೇರೆ ಆಲೋಚನೆಗಳಿವೆಯೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.