ವಿಧಾನ ಪರಿಷತ್ ಚುನಾವಣೆ | ಬಿಜೆಪಿ-ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ : ವಿಜಯೇಂದ್ರ
ಬೆಂಗಳೂರು : ‘ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದ್ದು, ಎಲ್ಲ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಇಂದು ಬಿಜೆಪಿ-ಜೆಡಿಎಸ್ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಷತ್ತಿನ ಚುನಾವಣೆ ಎದುರಿಸುವ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಮುಖಂಡರ ವಿಶೇಷ ಸಭೆ ಕರೆದಿದ್ದೆವು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಎಲ್ಲ ಮುಖಂಡರು, ಜಿಲ್ಲಾಧ್ಯಕ್ಷರು ಪ್ರಮುಖರು ಭಾಗವಹಿಸಿದ್ದರು ಎಂದು ವಿವರಿಸಿದರು.
ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಟ್ಟಾಗಿ-ಒಂದಾಗಿ ಚುನಾವಣೆ ಎದುರಿಸಬೇಕು. ನಾಲ್ಕು ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಆ ನಿಟ್ಟಿನಲ್ಲಿ ಒಟ್ಟಾಗಿ ಹೋರಾಟ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದೆ. ಕ್ಷೇತ್ರವಾರು ಯಾರ್ಯಾರು ಜವಾಬ್ದಾರಿ ಹೊಂದಿರಬೇಕು ಎಂಬುದರ ಘೋಷಣೆ ಮಾಡಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.
ಘೋಷಣೆಗೆ ಸೀಮಿತ: ಆರ್ಥಿಕ ಇಲಾಖೆ ಬರೆದ ಪತ್ರದ ಮೂಲಕ ಸರಕಾರ ಸ್ಥಿತಿ ಜಗಜ್ಜಾಹೀರಾಗಿದೆ. ಖಜಾನೆಯಲ್ಲಿ ಹಣ ಇಲ್ಲ. ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರವು ಕೇವಲ ಘೋಷಣೆಗೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋರಾಟ ಮಾಡಲಿದ್ದು, ಯಾವ ರೀತಿಯಲ್ಲಿ ಅಧಿಕಾರಕ್ಕೆ ಬರಬೇಕೆಂಬ ಬಗ್ಗೆ ಚರ್ಚಿಸಿದ್ದೇವೆ ಎಂದರು.