×
Ad

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

Update: 2023-08-11 13:57 IST

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧದ ಕಮಿಷನ್ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. 

ಈ ಕುರಿತು ಶುಕ್ರವಾರ ಸರಣಿ ಟ್ವೀಟ್  ಗಳನ್ನು ಮಾಡಿರುವ ಅವರು, ' ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು?'' ಎಂದು ಪ್ರಶ್ನೆ ಮಾಡಿದ್ದಾರೆ. 

''ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ'' ಎಂದು ತಿಳಿಸಿದ್ದಾರೆ. 

''ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ''

''ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ'' ಎಂದು ತಿಳಿಸಿದ್ದಾರೆ. 

''ಬಿಜೆಪಿ ಅವಧಿಯಲ್ಲಿ  ಕಾಮಗಾರಿಯನ್ನೇ ನಡೆಸದೆ ಬಿಲ್ ಹಣ ಪಡೆಯಲಾಗಿದೆ''

''ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ'' ಎಂದು ಅವರು ಹೇಳಿದ್ದಾರೆ. 

''ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?'' ಎಂದು ಪ್ರಶ್ನೆ ಮಾಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News