ಬೆಂಗಳೂರು : ವಿವಾದಿತ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಕುರಿತು ನಮ್ಮ ವಿರೋಧ ಇದೆ.ಆದರೆ, ಮಹಿಳಾ ಮೀಸಲಾತಿಗೆ ನಾವು ಒಪ್ಪಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣ ಸಂಗಮದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶನಿವಾರ ರಾತ್ರಿ ದೆಹಲಿಗೆ ಪ್ರವಾಸ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಸೂದೆ ಕುರಿತು ರವಿವಾರ ಕೇರಳ, ತೆಲಂಗಾಣ ಸಿಎಂ ಸೇರಿ ಚರ್ಚೆ ಮಾಡುತ್ತಿದ್ದು, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡುತ್ತೇವೆ. ಉತ್ತರ ಭಾರತದ ರಾಜ್ಯಗಳಲ್ಲಿ ಎಷ್ಟು ಸ್ಥಾನಗಳು ಹೆಚ್ಚಾಗಲಿವೆ. ದಕ್ಷಿಣ ಭಾರತದ ರಾಜ್ಯಗಳ ಪರಿಸ್ಥಿತಿ, ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗುವುದು. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದು, ಮಾಧ್ಯಮಗಳ ವರದಿಯ ಮಾಹಿತಿ ಮಾತ್ರ ನಮಗೆ ತಿಳಿದಿದೆ ಎಂದರು.

ನಾವು ನಮ್ಮ ಹಿತ ರಕ್ಷಣೆಗೆ ಹೋರಾಟ ಮಾಡುತ್ತೇವೆ. ಈ ಹಿಂದೆ ಡಿಎಂಕೆ ಕರೆದ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಡುತ್ತಿದ್ದಾರೆ. ನಾವು ನಮ್ಮ ಸಾರ್ವಭೌಮತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತೇವೆ. ಮಹಿಳಾ ಮೀಸಲಾತಿಗೆ ನಾವು ಒಪ್ಪಿದ್ದು, ಕ್ಷೇತ್ರ ಪುನರ್ವಿಂಗಡಣೆಗೆ ನಮ್ಮ ವಿರೋಧ ಎಂದು ಸ್ಪಷ್ಟಪಡಿಸಿದರು.

ದೇಶದ ಪ್ರಗತಿಗೆ ದಕ್ಷಿಣ ರಾಜ್ಯಗಳು ಶಕ್ತಿ ತುಂಬುತ್ತಿವೆ. ಅವರು ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಈ ವಿಚಾರವಾಗಿ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡುವ ನಿರೀಕ್ಷೆ ಇತ್ತು. ಸಿದ್ದರಾಮಯ್ಯ ಅವರು ಹೇಳಿದಂತೆ ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡಬೇಕಿತ್ತು ಎಂದರು.

ಕನ್ನಡಿಗರ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಮಸೂದೆಗೆ ಬೆಂಬಲ ನೀಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರ ಕಾಲದಲ್ಲಿ ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ಅವರು ಹೇಳಲಿ. ಖಾಲಿ ಮಾತು ಆಡುವುದಲ್ಲ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಮೀರ್ ದಳಸನೂರು\ವಾರ್ತಾಭಾರತಿ

ಬೆಂಗಳೂರು ವರದಿಗಾರರು

ಸಮೀರ್ ದಳಸನೂರು ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪದವಿ ಪಡೆದಿದ್ದು, ದೂರದರ್ಶನದ ಚಂದನ ವಾಹಿನಿಯಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ, ಆಕಾಶವಾಣಿಯಲ್ಲೂ ಅರೆಕಾಲಿಕ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಪ್ರಸ್ತುತ ಹಲವು ವರ್ಷಗಳಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.