×
Ad

ಹಳೆ ಬಟ್ಟೆ ಹಾಕಿಕೊಂಡು ಬರುವ ಬಡವರು ಕಂಡಾಗ ಉತ್ತಮ ಆರೋಗ್ಯ ಸೇವೆ ನೀಡಿ: ಸಿಎಂ ಸಿದ್ದರಾಮಯ್ಯ

Update: 2023-11-30 19:40 IST

ಬೆಂಗಳೂರು: ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಗುರುವಾರ ವಿಧಾನಸೌಧ ಮುಂಭಾಗದಲ್ಲಿ ಆರೋಗ್ಯ ಮತ್ರು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ, 262 ನೂತನ ಆ್ಯಂಬುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ನೂತನ ಆ್ಯಂಬುಲೆನ್ಸ್‌ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು.ಹೀಗಾಗಿಯೇ, ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ವಿವರಿಸಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರಕಾರದ ಗುರಿ ಎಂದ ಅವರು, ಪ್ರತೀ ಜಿಲ್ಲೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ಗಳಲ್ಲಿ ಸೇವಾ ವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರಕಾರ ಆಸ್ಪತ್ರೆಗಳಲ್ಲೇ ಉತ್ತಮಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಝ್ವಾನ್ ಆರ್ಶದ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಆರೋಗ್ಯ ಸೇವೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ದೇಶದಲ್ಲಿ ನಮ್ಮ ರಾಜ್ಯದಲ್ಲಿರುವ ಆರೋಗ್ಯ ವ್ಯವಸ್ಥೆ ಹಾಗೂ ಮೆಡಿಕಲ್ ಕಾಲೇಜುಗಳ ಸಂಖ್ಯೆ ಬೇರೆಲ್ಲೂ ಇಲ್ಲ. ದೇಶಕ್ಕೆ ಹೆಚ್ಚು ವೈದ್ಯರನ್ನು ನೀಡುತ್ತಿರುವ ರಾಜ್ಯ ಕರ್ನಾಟಕ. ಈ ವಿಚಾರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ. 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ನಮ್ಮ ರಾಜ್ಯದಲ್ಲಿದ್ದು 10 ಸಾವಿರಕ್ಕೂ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿದ್ದೇವೆ. ಇಡೀ ಪ್ರಪಂಚದ ವಿವಿಧ ಭಾಗಗಳಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ.

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News