ಬೆಳಗಾವಿಯಲ್ಲಿ ಡಿ.8 ರಿಂದ 19ರ ವರೆಗೆ ಚಳಿಗಾಲದ ಅಧಿವೇಶನ
ಬೆಂಗಳೂರು : ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.8ರಿಂದ 19ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ.
ಹಿಂದಿನ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸುವ ಅಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿಗೆ ನೀಡಿತ್ತು.
ಮುಂದಿನ ಅಧಿವೇಶನದಲ್ಲಿ ಜಿ.ಬಿ.ಎ ತಿದ್ದುಪಡಿ: ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ವಿವಿಧ ಕಲಂಗಳಿಗೆ ತಿದ್ದುಪಡಿ ತರುವ ಉದ್ದೇಶಹೊಂದಿರುವ ಬೆಂಗಳೂರು ಆಡಳಿತ (ಎರಡನೆ ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸರಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಆರ್ಥಿಖ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡುವ ಬಗ್ಗೆ ಹೆಚ್ಚಿನ ಸ್ಪಷ್ಟನೆಯನ್ನು ತರುವ ಉದ್ದೇಶದಿಂದ ಈ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.