ಹೊಸದಿಲ್ಲಿ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ 15ನೇ ಹಣಕಾಸು ಆಯೋಗದಡಿ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಗುರುವಾರ ಹೊಸದಿಲ್ಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಸತ್ಯೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದ ಯತೀಂದ್ರ ಸಿದ್ದರಾಮಯ್ಯ, ಕರ್ನಾಟಕದ ಅರ್ಹ ನಗರ ಸ್ಥಳೀಯ ಸಂಸ್ಥೆಗಳಿಗೆ ಬಾಕಿ ಇರುವ ಅನುದಾನವನ್ನು ಆದ್ಯತೆಯ ಮೇರೆಗೆ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿ, ಈ ಕುರಿತು ಚರ್ಚಿಸಿದರು.

2025–26ನೇ ಸಾಲಿನಲ್ಲಿ ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದಡಿ ಒಟ್ಟು 1,385 ಕೋಟಿ ರೂ. ಅನುದಾನ ನಿಗದಿಯಾಗಿದೆ. ಇದರಲ್ಲಿ 498 ಕೋಟಿ ರೂ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಾಗೂ 887 ಕೋಟಿ ರೂ. ರಾಜ್ಯದ ಇತರೆ 316 ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆಯಾಗಿದೆ. ಈ ಪೈಕಿ ಅಗತ್ಯ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿರುವ 93 ನಗರ ಸ್ಥಳೀಯ ಸಂಸ್ಥೆಗಳಿಗೆ 299.74 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಬೇಕಿದೆ ಎಂದು ಅವರು ಗಮನ ಸೆಳೆದರು.

ಬಾಕಿ ಇರುವ 299.74 ಕೋಟಿ ರೂ.ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವ ಮೂಲಕ ರಾಜ್ಯದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ, ಮೂಲಸೌಕರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲು ಸಹಕಾರಿಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

ಕೇಂದ್ರ ಸರಕಾರದಿಂದ ಈ ಅನುದಾನ ಶೀಘ್ರ ಬಿಡುಗಡೆಯಾದರೆ, ಅರ್ಹ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಹಾಗೂ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ನೆರವಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor