Photo credit : X@nabilajamal_

ಬೆಂಗಳೂರು: ಆಂಧ್ರಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ವೈ.ಎಸ್. ಶರ್ಮಿಳಾ ಅವರು ತಮ್ಮ ಸಹೋದರ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರ ಬೆಂಗಳೂರಿನ ವಿವಾದಿತ ಯಲಹಂಕ ನಿವಾಸಕ್ಕೆ ತೆರಳಲು ಯತ್ನಿಸಿದಾಗ ಪೊಲೀಸರು ತಡೆದಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶರ್ಮಿಳಾ ಅವರನ್ನು ಪೊಲೀಸರು ತಡೆದಿದ್ದು, ಅವರು ತಮ್ಮ ತಾಯಿ ವೈ.ಎಸ್. ವಿಜಯಮ್ಮ ಹಾಗೂ ಕುಟುಂಬದ ಇತರ ಸದಸ್ಯರೊಂದಿಗೆ ನಿವಾಸದತ್ತ ತೆರಳುತ್ತಿದ್ದರು.

ನ. 21ರಂದು ದೇವನಹಳ್ಳಿ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನ್ಯಾಯಾಲಯದ ಆದೇಶದಂತೆ ಶರ್ಮಿಳಾ ಮತ್ತು ಅವರಿಗೆ ಸಂಬಂಧಿಸಿದ ವ್ಯಕ್ತಿಗಳು ಜಗನ್ ಅವರ ಯಲಹಂಕದ ನಿವಾಸವಿರುವ ನಿವೇಶನದೊಳಗೆ ಪ್ರವೇಶಿಸುವುದನ್ನು ಹಾಗೂ ಆಸ್ತಿಯ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿರ್ಬಂಧಿಸಿದೆ.

ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದಂತೆ ಸಹೋದರ ಮತ್ತು ಸಹೋದರಿಯ ನಡುವೆ ನಡೆಯುತ್ತಿರುವ ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಶರ್ಮಿಳಾ ಅವರ ಮಗಳ ಮದುವೆ ನ. 25ರಂದು ನಡೆಯಲಿದ್ದು, ಪ್ರಾರಂಭದಲ್ಲಿ ಬೆಂಗಳೂರಿನ ಈ ನಿವಾಸದಲ್ಲಿ ಮದುವೆ ನಡೆಸಲು ಯೋಜಿಸಲಾಗಿತ್ತು. ಆದರೆ ಜಗನ್‌ ರೆಡ್ಡಿ ಅವರು ಸಮ್ಮತಿ ಸೂಚಿಸದ ಬಳಿಕ ಮದುವೆಯನ್ನು ಹೈದರಾಬಾದ್ ಗೆ ಸ್ಥಳಾಂತರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

contributor

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.