×
Ad

ಕೆಪಿಎಸ್ ಮಾದರಿಯಲ್ಲಿ 100 ಉರ್ದು ಶಾಲೆಗಳ ಅಭಿವೃದ್ಧಿ : ಝಮೀರ್ ಅಹ್ಮದ್ ಖಾನ್

Update: 2025-06-25 20:55 IST

ಬೆಂಗಳೂರು : ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್‍ನಲ್ಲಿ 500ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅದೇ ರೀತಿ ಮದ್ರಸಾಗಳಲ್ಲಿ ಮಕ್ಕಳಿಗೆ ಲೌಕಿಕ ಶಿಕ್ಷಣವನ್ನು ಒದಗಿಸಲು 35 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಜೊತೆಗೆ, ಮೌಲಾನಾ ಆಝಾದ್ ಹಾಗೂ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೌಲಾನಾ ಆಝಾದ್ ಶಾಲೆಗಳಲ್ಲಿ ಶೇ.60, ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಶೇ.85ರಷ್ಟು ದಾಖಲಾತಿಯಾಗಿದೆ. ಪಿಯುಸಿ ಕೋರ್ಸ್‍ಗಳಿಗೆ ಶೇ.70ರಷ್ಟು ದಾಖಲಾತಿಯಾಗಿದೆ. ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

ಪಿಯುಸಿ ಮುಗಿಸಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲು ವ್ಯವಸ್ಥೆ ಮಾಡಬೇಕು. ಜೊತೆಗೆ, ವಕ್ಫ್ ಬೋರ್ಡ್ ವತಿಯಿಂದ 16 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜುಗಳನ್ನು ಆರಂಭಿಸುವ ಕುರಿತು ಕೂಡಲೆ ಟೆಂಡರ್ ಕರೆದು, ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ರಾಜ್ಯ ಬಜೆಟ್‍ನಲ್ಲಿ ಹೊಸ ಶಾದಿಮಹಲ್‍ಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದುದರಿಂದ, ಉತ್ತಮವಾದ ಮಾದರಿಯನ್ನು ಸಿದ್ಧಪಡಿಸಿ ಮುಂದಿನ ಪ್ರಗತಿಪರಿಶೀಲನಾ ಸಭೆಯಲ್ಲಿ ಮಂಡಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಬಿ.ಕೆ. ಅಲ್ತಾಫ್ ಖಾನ್, ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಝ್ ಖಾನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News