×
Ad

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

Update: 2025-08-13 15:28 IST

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು, ತನಿಖೆಗೆ ಒಳಸಪಡಿಸಬೇಕು ಎಂದು ಆಗ್ರಹಿಸಿ ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತಾಧಿಗಳು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಟೌನ್‍ಹಾಲ್ ವೃತ್ತದಿಂದ ಎಂ.ಜಿ.ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ ನೂರಾರು ಭಕ್ತಾಧಿಗಳು, ಧರ್ಮಸ್ಥಳದ ಹೆಸರಿಗೆ ಚ್ಯುತಿ ಉಂಟು ಮಾಡಲು ಯತ್ನಿಸುತ್ತಿರುವ ಎಲ್ಲಾ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ, ಬಿತ್ತಿ ಪತ್ರ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಟೌನ್‍ಹಾಲ್ ಬಳಿ ಪ್ರತಿಭಟನೆ ಕುರಿತಂತೆ ಮಾತನಾಡಿದ ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್, ಕಳೆದ 25-30 ವರ್ಷಗಳಿಂದಲೂ ಧರ್ಮಸ್ಥಳದ ಪರಂಪರೆಯ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಧರ್ಮಸ್ಥಳದ ಹೆಸರು ಹಾಳು ಮಾಡಲು ಇನ್ನಿಲ್ಲದ ಪ್ರಯತ್ನವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿವೆ. ಸರಕಾರ ಕೂಡಲೇ ಸುಳ್ಳು ಸುದ್ದಿ ಹರಡುತ್ತಿರುವ ಜನರ ವಿರುದ್ದ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಎಸ್.ಶಿವಣ್ಣ, ಪತ್ರಕರ್ತ ಆರ್.ಕಾಮರಾಜು, ಬೆಳ್ಳಾವೆಯ ಶ್ರೀಕಾರದ ವೀರಬಸವಸ್ವಾಮೀಜಿ ವಿಜಯಭಾಸ್ಕರ್ ಅವರು ಮಾತನಾಡಿದರು.

ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಮಿತ್ರವೃಂದ ಜಿಲ್ಲಾಧ್ಯಕ್ಷ ಅಮರನಾಥಶೆಟ್ಟಿ ಸೇರಿದಂತೆ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು, ಸಾರ್ವಜನಿಕರು,ಮಹಿಳೆಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News