×
Ad

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಯಾವ ಟೀಕೆಗೂ ಬಗ್ಗುವುದಿಲ್ಲ : ಜಿ.ಪರಮೇಶ್ವರ್‌

Update: 2026-02-27 19:41 IST

ತುಮಕೂರು. : ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಹಾಗೂ ಯಾವ ಟೀಕೆಗೂ ಸರಕಾರ ಬಗ್ಗುವುದಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡತನ ನಿರ್ಮೂಲನೆ ಮಾಡಬೇಕು. ಕರ್ನಾಟಕದ ಜನತೆ ವಿದ್ಯಾವಂತರಾಗಬೇಕು. ಹಳ್ಳಿಯ ಹುಡುಗರು ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ಸಮಾಜವನ್ನು ಕಟ್ಟಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಜನಕಲ್ಯಾಣದ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಹಾಗೂ ಈ ಸಂಬಂಧ ಯಾವುದೇ ಟೀಕೆಗೂ ಸರಕಾರ ಬಗ್ಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜನರಿಗೆ ಆರ್ಥಿಕ ಶಕ್ತಿ ನೀಡಬೇಕು. ದುಡಿಯುವ ಕೈಗೆ ಉದ್ಯೋಗ ಸಿಗಬೇಕು. ಜನರು ಹಸಿವಿನಿಂದ ಮುಕ್ತರಾಗಬೇಕೆಂಬ ಸದುದ್ದೇಶದಿಂದ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಗಳಿಂದ ಜನರ ಬದುಕಿನಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಅವಧಿಯ ಸರಕಾರದಲ್ಲಿ ಹಸಿವು ಮುಕ್ತ ಕರ್ನಾಟಕ ಘೋಷಣೆಯ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಪರಿಕಲ್ಪನೆಯನ್ನು ರಾಜ್ಯದ ಜನತೆ ಮೆಚ್ಚಿದ್ದರು. ಅದಲ್ಲದೆ, ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದು ದೇಶಾದ್ಯಂತ ಹಾಗೂ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ. ಜನರ ಕಷ್ಟ-ಸುಖಗಳನ್ನು ನಮ್ಮ ಸರಕಾರ ಅರ್ಥ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜನರ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.

ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯನ್ನು ಬೆಂಗಳೂರಿಗೆ ಸಮಾನವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ಈ ಹಿಂದೆ ದೇಶದಲ್ಲಿ ಗುಜರಾತ್ ಮಾದರಿ ಎಂದೆಲ್ಲಾ ಹೇಳಲಾಗುತ್ತಿತ್ತು. ಆದರೆ ಈಗ ಕರ್ನಾಟಕ ಮಾದರಿ ಎಂಬ ಹೆಸರು ದೇಶಾದ್ಯಂತ ಕೇಳಿ ಬರುತ್ತಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ರಾಜ್ಯವಾಗಿ ಪರಿಗಣಿಸಲ್ಪಟ್ಟಿದೆ ಎಂದರು

ಜಾಗೃತ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಡಾ.ಎಚ್.ವಿ.ವಾಸು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ ಸ್ವಾಗತಿಸಿದರು. ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಗೌಡ, ಉಪಾಧ್ಯಕ್ಷರಾದ ನರಸೀಯಪ್ಪ, ಶಿವಪ್ರಸಾದ್, ಹನುಮಂತಪ್ಪ, ಪಂಚಾಕ್ಷರಪ್ಪ, ಬಸವರಾಜು, ಅಂಬರೀಷ್ ಹಾಗೂ ವಿವಿಧ ತಾಲ್ಲೂಕುಗಳ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಸಮಾವೇಶದಲ್ಲಿ ವಿವಿಧ ತಾಲ್ಲೂಕುಗಳಿಂದ 4,000ಕ್ಕೂ ಹೆಚ್ಚು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಭಾಗವಹಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತಿಯಿಂದ ವಿವಿಧ ಇಲಾಖೆಗಳ ಹಾಗೂ ಗ್ಯಾರಂಟಿ ಯೋಜನೆಗಳ ಮಳಿಗೆಗಳನ್ನು ತೆರೆಯಲಾಗಿತ್ತು. ಅಲ್ಲದೆ, ವಿವಿಧ ಗ್ಯಾರಂಟಿ ಯೋಜನೆಗಳ ಕುರಿತು ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಿದ್ದು ವಿಶೇಷವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News