ತುಮಕೂರು : ಕನ್ನಡಿಗರ ಅಸ್ಮಿತೆಯಾಗಿರುವ ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜ ಹಾಗೂ ನಾಡಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ಮತ್ತು ಕರ್ನಾಟಕದ ಸಂಸ್ಕೃತಿಯ ಸಂಕೇತವಾಗಿರುವ ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಬಾವುಟಕ್ಕೆ ಮಾನ್ಯತೆ ನೀಡುವಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಈವರೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಬಾವುಟಕ್ಕೆ ಕಾನೂನುಬದ್ಧ ಮಾನ್ಯತೆ ನೀಡಿ ಅಧಿಕೃತ ಸ್ಥಾನಮಾನ ಕಲ್ಪಿಸಬೇಕು ಎಂಬುದು ರಾಜ್ಯ ಸರ್ಕಾರದ ಒತ್ತಾಯವಾಗಿದೆ. ಕೇಂದ್ರ ಸರ್ಕಾರ ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಿದರೆ ಅದು ನಮ್ಮ ನಾಡು, ನುಡಿ ಹಾಗೂ ಭಾಷೆಗೆ ನೀಡುವ ಗೌರವವಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಕನ್ನಡ ಭಾಷೆ, ಬಾವುಟ ಹಾಗೂ ಕನ್ನಡಿಗರ ಆಶೋತ್ತರಗಳಿಗೆ ಗೌರವ ನೀಡಲಿದೆ ಎಂಬ ಆಶಯವಿದೆ ಎಂದರು.

ಕರ್ನಾಟಕದ ಜನರ ಮೇಲೆ ಬಲವಂತವಾಗಿ ಹಿಂದಿ ಭಾಷೆ ಹೇರುವ ಪ್ರಯತ್ನ ನಡೆಯುತ್ತಿದೆ. ಒಂದು ಭಾಷೆಯನ್ನು ತುಳಿದು ಮತ್ತೊಂದು ಭಾಷೆಯನ್ನು ಹೇರುವುದರ ವಿರುದ್ಧ ನಾವೆಲ್ಲರೂ ಹೋರಾಡಬೇಕು. ಭಾರತ ಬಹುಸಂಸ್ಕೃತಿಗಳ ಒಕ್ಕೂಟವಾಗಿದ್ದು, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಎಲ್ಲ ಭಾಷೆ ಮತ್ತು ಸಂಸ್ಕೃತಿಗಳಿಗೆ ಸಮಾನ ಅವಕಾಶ ನೀಡಿದಾಗ ಮಾತ್ರ ಭಾರತದ ಐಕ್ಯತೆಯನ್ನು ಕಾಪಾಡಲು ಸಾಧ್ಯ. ಭಾರತ ಮತ್ತಷ್ಟು ಸುಭದ್ರವಾಗಿರಬೇಕಾದರೆ ಸರ್ವಜನರ ಶಾಂತಿಯ ತೋಟವಾಗಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ಸೇವೆ ಮಾಡಲು ಹಾಗೂ ಭಾಷೆಯನ್ನು ಬೆಳೆಸಲು ನಾವೆಲ್ಲರೂ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಿ, ಅರ್ಥೈಸಿಕೊಳ್ಳಬೇಕು. ಈ ಕಾರ್ಯ ನಮ್ಮಿಂದಲೇ ಆರಂಭವಾಗಲಿ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ನಾಡಿನ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದು, ಸಾಂಸ್ಕೃತಿಕವಾಗಿ ಹಾಗೂ ಸಾಹಿತ್ಯಿಕವಾಗಿ ಕನ್ನಡ ಭಾಷೆಯನ್ನು ಮತ್ತಷ್ಟು ಸಮೃದ್ಧಗೊಳಿಸಲು ಕ್ರಮ ಕೈಗೊಂಡಿದೆ. ನಾಡಿನ ನೆಲ-ಜಲ ಸಂರಕ್ಷಣೆ, ಜನರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು, ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದರು.

ಕನ್ನಡ ನಿತ್ಯೋತ್ಸವವಾಗಿ ಮೆರೆಯಬೇಕಾದರೆ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ನೆಮ್ಮದಿಯ ಬದುಕು ದೊರೆಯಬೇಕು ಎಂಬುದು ಸರ್ಕಾರದ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ನಾಡಿನ ಜನತೆಗೆ ರಕ್ಷೆಯಾಗಿ ನಿಂತಿದೆ ಎಂದು ತಿಳಿಸಿದರು.

1965ರಲ್ಲಿ ಕರ್ನಾಟಕ ಏಕೀಕರಣಗೊಂಡಿದ್ದರೂ ರಾಜ್ಯವನ್ನು ವಿಶಾಲ ಮೈಸೂರು ರಾಜ್ಯ ಎಂದೇ ಕರೆಯಲಾಗುತ್ತಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು 1973ರ ನವೆಂಬರ್ 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ಅಂದಿನಿಂದ ವಿಶಾಲ ಮೈಸೂರು ರಾಜ್ಯವು ಕರ್ನಾಟಕ ಎಂಬ ಹೆಸರಿನಲ್ಲಿ ಭಾರತದ ಭೂಪಟದಲ್ಲಿ ಗುರುತಿಸಿಕೊಂಡಿದೆ. ಸ್ವಾತಂತ್ರ್ಯ ಹೋರಾಟ, ಕನ್ನಡ ಏಕೀಕರಣ ಹಾಗೂ ಕನ್ನಡ ಸಾರಸ್ವತ ಲೋಕಕ್ಕೆ ಕಲ್ಪತರುನಾಡು ತುಮಕೂರಿನ ಕೊಡುಗೆ ಅಪಾರವಾಗಿದೆ ಎಂದರು.

ಕಲ್ಪವೃಕ್ಷಗಳ ನಾಡಾಗಿರುವ ತುಮಕೂರು ರೈತರ ಬದುಕನ್ನು ಹಸನುಗೊಳಿಸುವುದರ ಜತೆಗೆ ಕನ್ನಡ ಸಾಹಿತ್ಯ ಲೋಕಕ್ಕೂ ದೊಡ್ಡ ಕೊಡುಗೆ ನೀಡಿದೆ. ವಿಶ್ವಕ್ಕೆ ಅಕ್ಷರ ದಾಸೋಹ, ಅನ್ನ ದಾಸೋಹ ಸೇರಿದಂತೆ ತ್ರಿವಿಧ ದಾಸೋಹದ ಪರಂಪರೆಯನ್ನು ಪರಿಚಯಿಸಿದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಕಾಯಕ ಸೇವೆ ಪ್ರಪಂಚದಾದ್ಯಂತ ಸ್ಮರಣೀಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ತಂಡ, ಕರ್ನಾಟಕ ಮೀಸಲು ತಂಡ, ಗೃಹರಕ್ಷಕ ದಳ, ಮಹಿಳಾ ಪೊಲೀಸ್ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ತಂಡ ಹಾಗೂ ವಿವಿಧ ಶಾಲೆಗಳ ಬಾಲಕ-ಬಾಲಕಿಯರ ತಂಡಗಳು ಸೇರಿದಂತೆ 20ಕ್ಕೂ ಅಧಿಕ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜ್ಯೋತಿಗಣೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತೆ ಶುಭ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಟೂಡಾ ಆಯುಕ್ತ ಉಮೇಶ್ಚಂದ್ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಡಿಡಿಪಿಐ ರಘುಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor