ತುಮಕೂರಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಉದ್ದೇಶ: ಡಿಸಿಎಂ ಪರಮೇಶ್ವರ್
ತುಮಕೂರು : ತುಮಕೂರಿನ ಸಾಂಸ್ಕೃತಿಕ ಪರಂಪರೆ, ಕಲೆ, ಸಾಹಿತ್ಯ, ರಂಗಭೂಮಿ ಹಾಗೂ ಐತಿಹಾಸಿಕ ಹಿರಿಮೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಅ.11ರಿಂದ ತುಮಕೂರು ದಸರಾ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಅ.21ರಂದು ಸಮಾರೋಪಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನ ಪದವಿಪೂರ್ವ ಕಾಲೇಜು ಆವರಣದಲ್ಲಿ ದಸರಾ ಮಹೋತ್ಸವದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ತುಮಕೂರು ದಸರಾವನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಕಲೆ, ಸಾಹಿತ್ಯ, ಕ್ರೀಡೆ ಮತ್ತು ರಂಗಭೂಮಿಯಲ್ಲಿ ತುಮಕೂರು ಜಿಲ್ಲೆಗೆ ವಿಶಿಷ್ಟ ಸ್ಥಾನವಿದೆ. ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಯನ್ನು ಉಳಿಸಿ ಬೆಳೆಸುವುದರೊಂದಿಗೆ ಯುವಜನತೆಯಲ್ಲಿ ತಮ್ಮ ಜಿಲ್ಲೆಯ ಇತಿಹಾಸ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವುದು ಈ ಉತ್ಸವದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಕೇವಲ ಎರಡು ವರ್ಷಗಳಲ್ಲಿ ತುಮಕೂರು ದಸರಾ ಜನಪ್ರಿಯತೆ ಗಳಿಸಿದ್ದು, ಮೈಸೂರಿಗೆ ತೆರಳುವ ಬದಲು ತುಮಕೂರಿನಲ್ಲಿಯೇ ದಸರಾ ಆಚರಿಸುವ ಬಗ್ಗೆ ಜನರು ಮಾತನಾಡುವಂತಾಗಿದೆ. ಜನಪ್ರತಿನಿಧಿಗಳು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಉತ್ಸವ ಯಶಸ್ವಿಯಾಗಿ ನಡೆಯುತ್ತಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ದಸರಾ ಕೇವಲ ಸರಕಾರಿ ಕಾರ್ಯಕ್ರಮವಾಗದೆ ಜನರ ಹಬ್ಬವಾಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.