Tumakur | ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ತಿಪಟೂರು: ನಗರದ ಬಿ.ಎಚ್. ರಸ್ತೆಯ ಕಲ್ಪತರು ಕಾಲೇಜು ಮುಂಭಾಗದಲ್ಲಿ ರಸ್ತೆ ಬದಿಯ ಮರ ಮುರಿದು ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಸೂಗೂರು ಗ್ರಾಮದ ನಿವೃತ್ತ ಶಿಕ್ಷಕ ಶಿವಸ್ವಾಮಿ (62) ಎಂದು ಗುರುತಿಸಲಾಗಿದೆ.
ಶಿವಸ್ವಾಮಿ ಅವರು ಬೆಳಿಗ್ಗೆ ಸುಮಾರು 11.30ರ ವೇಳೆಗೆ ತಮ್ಮ ಇವಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಮರ ಮುರಿದು ಅವರ ಮೇಲೆ ಬಿದ್ದಿದೆ. ಘಟನೆಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ತಿಪಟೂರು ನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಯತೀಶ್, ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಶ್ ಹಾಗೂ ಪೌರಾಯುಕ್ತ ವಿಶ್ವೇಶ್ವರ ಬದರಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.