ಉಡುಪಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ, ಆ.31: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ವನ್ನು ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಾಜ್ಯದಲ್ಲಿ ಬೆಂಗಳೂರು ನಗರದ ಬಳಿಕ ಅತ್ಯಂತ ಸುಸಜ್ಜಿತ ಕ್ರೀಡಾಂಗಣವನ್ನು ಹೊಂದಿರುವ ಜಿಲ್ಲೆ ಉಡುಪಿ ಯಾಗಿದೆ. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿರುವಂತೆ ಕ್ರೀಡಾಕೂಟ ಗಳಲ್ಲಿಯೂ ಕೂಡಾ ಹೆಸರು ಪಡೆಯುವಂತಾ ಗಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿರುವ ಅತ್ಯಾಧುನಿಕ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲ ವಿದ್ಯಾರ್ಥಿಗಳ ಬೆನ್ನಿಗಿದ್ದು, ಕ್ರೀಡಾಪಟುಗಳು ಜಿಲ್ಲೆಯ ಗೌರವವನ್ನು ಹೆಚ್ಚಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಾಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು ಮುಂದೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಜಿಲ್ಲೆಯ ಕ್ರೀಡಾಳುಗಳು ಉತ್ತಮ ಸಾಧನೆ ಮಾಡಿ ಯಶಸ್ವಿಯಾಗುವಂತೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಡುಪಿ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ, ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜಿನ ದೈಹಿಕ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಮೊದಲಾದವರು ಉಪಸ್ಥಿತರಿದ್ದರು.
ಬಲೂನ್ ಹಾರಿಸುವ ಮೂಲಕ ಸಾಂಕೇತಿಕವಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಬಳಿಕ ನಡೆದ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.