×
Ad

ಜನಸಾಮಾನ್ಯರಿಗೆ ಪ್ರಜಾಪ್ರಭುತ್ವ ಶಕ್ತಿಯ ಅರಿವು ಮೂಡಿಸುವ ಪ್ರಯತ್ನ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟನೆ

Update: 2025-09-15 20:55 IST

ಉಡುಪಿ, ಸೆ.15: ಜನಸಾಮಾನ್ಯರಿಗೆ ಪ್ರಜಾಪ್ರಭುತ್ವದ ಶಕ್ತಿ ಹಾಗೂ ಸಂವಿಧಾನಬದ್ಧ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯ ದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ, ಸೈಕಲ್ ಜಾಥಾಕ್ಕೆ ಚಾಲನೆ ನೀಡಿ, ಸಂವಿಧಾನ ಪೀಠಿಕೆ ಪ್ರತಿಜ್ಞೆ ಬೋಧಿಸಿ ಅವರು ಮಾತನಾಡುತಿದ್ದರು.

ಜನಸಾಮಾನ್ಯರಿಗೆ ಇವುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೈಕ್ ಜಾಥಾ, ಛಾಯಾಚಿತ್ರ, ಚಿತ್ರಕಲೆ, ಭಾಷಣ ಸ್ಪರ್ಧೆ ಮತ್ತು ಸೈಕಲ್ ಜಾಥಾ ಗಳನ್ನು ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಬಗ್ಗೆ ಅರಿವು ಇದ್ದಾಗ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ ಎಂದವರು ಹೇಳಿದರು.

‘ನನ್ನ ಮತ ನನ್ನ ಹಕ್ಕು’, ‘ಗಾಂಧೀ ಭಾರತ’, ‘ಸಂವಿಧಾನ ಪೀಠಿಕೆ’ ಬಗ್ಗೆ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೈಕ್ ರ್ಯಾಲಿ ಮತ್ತು ಸೈಕಲ್ ರ್ಯಾಲಿಗಳ ಮೂಲಕ ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜನರು ಸಂವಿಧಾನದ ಬಗ್ಗೆ ಅರಿತು ಕೊಳ್ಳಬೇಕು. ನಮ್ಮದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಇದನ್ನು ಸದೃಢಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.

ಸೈಕಲ್ ರ್ಯಾಲಿಯು ಜಿಲ್ಲಾ ಕ್ರೀಡಾಂಗಣದಿಂದ ಹೊರಟು ಸಿಟಿ ಬಸ್ ನಿಲ್ದಾಣ, ಕಲ್ಸಂಕ, ಕಡಿಯಾಳಿ, ಎಂ.ಜಿ.ಎಂ ಕಾಲೇಜು ಮಾರ್ಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ತಲುಪಿ ಮರಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾಪ್ತಿಗೊಂಡಿತು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್ ಎಸ್ ಕದ್ರೋಳಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ,ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಸೈಕಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಡಾ. ಗುರುರಾಜ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.








 


 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News