×
Ad

ಬೆಂಬಲ ಬೆಲೆಯಲ್ಲಿ ಭತ್ತದ ಖರೀದಿಗೆ ಸಿದ್ಧತೆ ಮಾಡಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

Update: 2025-09-23 20:09 IST

ಉಡುಪಿ, ಸೆ.23: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್‌ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ಸಾಮಾನ್ಯ ಭತ್ತಕ್ಕೆ 2369 ರೂ. ಹಾಗೂ ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗದಿಪಡಿಸಲಾಗಿದೆ. ಉಡುಪಿ ಮತ್ತು ಕಾರ್ಕಳದ ಎಪಿಎಂಸಿ ಯಾರ್ಡ್ ಹಾಗೂ ಕೋಟೇಶ್ವರದ ಕೆಎಫ್‌ಸಿಎಸ್‌ಸಿ ಗೋದಾಮಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ರೈತರು ಬೆಳೆದಿರುವ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರುಟ್ಸ್ ದತ್ತಾಂಶ ದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿಯನ್ವಯ ಹಾಗೂ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ವಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ರೈತರಿಂದ ಭತ್ತವನ್ನು ಖರೀದಿಸುವಂತೆ ಡಿಸಿ ಸೂಚಿಸಿದರು.

ಖರೀದಿಯಾಗುವ ಭತ್ತವನ್ನು ಗೋದಾಮುಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಭತ್ತ ಖರೀದಿ ನೋಂದಣಿ ಪ್ರಾರಂಭವಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಅವರು ತಿಳಿಸಿದರು.

ಭತ್ತವನ್ನು ಸರಬರಾಜು ಮಾಡುವ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಡಿಬಿಟಿ ಮೂಲಕ ನೇರ ನಗದು ವರ್ಗಾ ವಣೆ ಮಾಡುವಂತೆ ಸೂಚಿಸಿದ ಅವರು, ಪ್ರತೀ ರೈತರಿಂದ ಪ್ರತೀ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಖರೀದಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಎಸ್.ಎಸ್ ಕದ್ರೋಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಪೂರ್ಣಿಮಾ ಜೆ.ಸಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು ಎಂ.ಎಸ್, ಆಹಾರ ಇಲಾಖೆಯ ಉಪ ನಿರ್ದೇಶಕಿ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News