ಆಸಕ್ತಿ ಕ್ಷೇತ್ರದ ಬಗ್ಗೆ ಗಮನ ಕೇಂದ್ರೀಕರಿಸಿದರೆ ವೃತ್ತಿಜೀವನದಲ್ಲಿ ಯಶಸ್ಸು: ಸೋದೆ ಶ್ರೀ
ಉಡುಪಿ, ಅ.5: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮವು ರವಿವಾರ ವಿದ್ಯಾಲಯದ ಆವರಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದ ಮೇಲೆ ಗಮನವನ್ನು ಕೇಂದ್ರೀಕರಿಸಿ ವೃತ್ತಿ ಜೀವನದಲ್ಲಿ ಶ್ರೇಷ್ಠತೆಯನ್ನು ಸಾಧಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥ ಪ್ರಭವ್ ಎನ್.ರಾವ್, ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ, ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ಮಾತನಾಡಿದರು.
ಈ ಸಂದರ್ಭದಲ್ಲಿ ಸಿಇಟಿಯಲ್ಲಿ ಉತ್ತಮ ರ್ಯಾಂಕ್ ಪಡೆದ ವಿದ್ಯಾ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆಡಳಿತ ಮಂಡಳಿಯ ಸದಸ್ಯ ಹರೀಶ್ ಬೆಳ್ಮಣ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಮತ್ತು ಸಂಸ್ಥೆಯ ಡೀನ್‌ಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಶೈಕ್ಷಣಿಕ ವಿಭಾಗದ ಡೀನ್ ಡಾ.ನಾಗರಾಜ್ ಭಟ್ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಪ್ರಥಮ ವರ್ಷದ ಬಿ.ಇ. ಕೋರ್ಸ್‌ನ ಸಂಯೋಜಕ ಡಾ. ಲೊಲಿಟ ಪ್ರಿಯ ಕ್ಯಾಸ್ತಲಿನೊ ವಂದಿಸಿದರು. ಪ್ರಾಧ್ಯಾಪಕರಾದ ಕಾರ್ತಿಕ್ ಮತುತಿ ಆಶ್ರಿತಾ ಕಾರ್ಯಕ್ರಮ ನಿರೂಪಿಸಿದರು.