×
Ad

ಉಡುಪಿ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ದೀಪ ಸಂಜೀವಿನಿಗೆ ಚಾಲನೆ

Update: 2025-10-16 19:09 IST

ಉಡುಪಿ, ಅ.16: ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾಪಂ ಕಟ್ಟಡದಲ್ಲಿರುವ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಪಂ ಯೋಜನಾ ನಿರ್ದೇಶಕ ವಿಜಯ ಕುಮಾರ್ ಮಾತನಾಡಿ, ಮಹಿಳೆಯರು ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳಿಗೆ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಮಾರು ಕಟ್ಟೆ ಕಲ್ಪಿಸುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಬ್ರಾಂಡ್ ರೀತಿಯಲ್ಲಿ ಪ್ರಚಾರ ಮಾಡಬೇಕಾದ ಅಗತ್ಯ ಇದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಆಕರ್ಷಿಸಬೇಕು. ಮಹಿಳೆಯರು ಸ್ವಾವಲಂಬಿಗಳಾಗಿ ಆದಾಯ ಗಳಿಸುವುದರಿಂದ ಮನೆ ಬೆಳಗುತ್ತದೆ ಮತ್ತು ಸಮಾಜ ಬೆಳೆಯುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರಕಾರ ಮಹಿಳೆಯರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು. ಇಲ್ಲಿನ ಉತ್ಪನ್ನಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಅಗತ್ಯವಾಗಿ ಮಾಡಬೇಕು. ಆ ಮೂಲಕ ತಮ್ಮದೇ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಬಹುದಾಗಿದೆ ಎಂದರು.

ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ತಾಪಂ ವ್ಯವಸ್ಥಾಪಕಿ ಫರ್ಯಾನ, ಸ್ವರ್ಣ ಸಂಜೀವಿನಿ ಉಡುಪಿ ತಾಲೂಕು ಒಕ್ಕೂಟದ ಅಧ್ಯಕ್ಷೆ ಸುಲೋಚನಾ ಕುಂದರ್, ಉದ್ದಿಮೆದಾರೆ ಗೀತಾ ಪಾಲನ್ ಉಪಸ್ಥಿತರಿದ್ದರು.

ಅಂಬಲಪಾಡಿ ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಐರಿನ್ ಅಂದ್ರಾದೆ ಸ್ವಾಗತಿಸಿದರು. ಕಾರ್ಯದರ್ಶಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ದೀಪಾವಳಿ ಹಬ್ಬವನ್ನು ಆಚರಿಸಲು ಬೇಕಾದ ವಿವಿಧ ರೀತಿ ಉತ್ಪನ್ನಗಳನ್ನು ಇಲ್ಲಿ ಲಭ್ಯ ಇದೆ. ಇದರ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News