×
Ad

ರಾಷ್ಟ್ರ ಗೌರವಕ್ಕಾಗಿ ಚೆನ್ನಮ್ಮ ಬದುಕು ಸಮರ್ಪಣೆ: ಸಂಸದ ಕೋಟ

Update: 2025-10-23 20:31 IST

ಉಡುಪಿ, ಅ.23: ರಾಷ್ಟ್ರಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟ್ರದ ಗೌರವವನ್ನು ಕಾಪಾಡುವಲ್ಲಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‌ನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಚೆನ್ನಮ್ಮ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಸಂಘಟನ ಶಕ್ತಿಯನ್ನು ಬೆಳೆಸಿ, ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆ ಯರ ಸಾಲಿಗೆ ಸೇರ್ಪಡೆಗೊಳ್ಳುವ ಮೂಲಕ ಆದರ್ಶಮಯ ವ್ಯಕ್ತಿಯಾಗಿ, ಶಕ್ತಿಯಾಗಿ, ಮಹಿಳೆಯರಿಗೆ ಸ್ಫೂರ್ತಿಯಾದರು ಎಂದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಶಾಸಕ ಯಶ್‌ಪಾಲ್ ಎ ಸುವರ್ಣ ವಹಿಸಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮರ ವಿಚಾರ, ಬದುಕಿದ ರೀತಿ ಅವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದರು.

ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ್ ಯು.ಸಿ ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಜಗನ್ನಾಥ ಪಣಸಾಲೆ ಹಾಗೂ ಇತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ದರೆ, ಇಲಾಖೆಯ ವರ್ಷಾ ಬಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News