×
Ad

ಪಟ್ಟಾಭೂಮಿಯಲ್ಲಿ ಕೆಂಪು ಕಲ್ಲುಗಣಿಗಾರಿಕೆಗೆ ಅರಣ್ಯ ಇಲಾಖೆ ಆಕ್ಷೇಪ: ಉಸ್ತುವಾರಿ ಸಚಿವರಿಂದ ತರಾಟೆ

3 ದಿನಗಳಲ್ಲಿ ಸೂಕ್ತಕ್ರಮಕ್ಕೆ ಸೂಚನೆ

Update: 2025-10-31 21:18 IST

ಉಡುಪಿ, ಅ.31: ಜಿಲ್ಲೆಯಲ್ಲಿ ಸಾರ್ವಜನಿಕರು ವಾಸದ ಮನೆ ಅಥವಾ ಕಟ್ಟಡ ಕಟ್ಟಲು ವಿಶೇಷ ಬೇಡಿಕೆ ಇರುವ ಕೆಂಪು ಕಲ್ಲು ಗಣಿಗಾರಿಕೆಗೆ ಪಟ್ಟಾ ಭೂಮಿಯಲ್ಲಿ 3ಎನಲ್ಲಿ ಅನುಮತಿ ನೀಡಿದರೂ ಸಹ ಅರಣ್ಯ ಇಲಾಖೆ ಆಕ್ಷೇಪಣೆ ಮಾಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು, ಮೂರು ದಿನಗಳ ಒಳಗಾಗಿ ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆಯೂ ಆಗಿರುವ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸ್ಪಷ್ಟ ಸೂಚನೆ ನೀಡಿದ್ದಾರೆ.

ಶುಕ್ರವಾರ ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಜಿಲ್ಲೆಯ ಜನಸಾಮಾನ್ಯರ ಮನೆ ನಿರ್ಮಾಣಕ್ಕೆ ಮರಳು ಹಾಗೂ ಕೆಂಪುಕಲ್ಲಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದೂ ಅವರು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರಕಾರಕ್ಕೆ ಉತ್ತಮ ಹೆಸರು ಬರುತ್ತದೆ. ಹೀಗಾಗಿ ಜಿಲ್ಲೆಯ ಎಲ್ಲಾ ಅನುಷ್ಠಾನಾಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದ ರೊಂದಿಗೆ ಜನಸ್ನೇಹಿಯಾಗಿ ತಮ್ಮ ಕಾರ್ಯಗಳನ್ನು ನಿರ್ವಹಿಸ ಬೇಕು ಎಂದವರು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದೆ. ಆದರೆ ಬೆಳೆ ಹಾನಿ ಪ್ರಮಾಣ 34.72 ಹೆಕ್ಟೇರ್ ಅಷ್ಟೇ ಇದೆ. ಜಿಲ್ಲೆಯಲ್ಲಿ ಕಳೆದ ಸಾಲಿಗಿಂತ ಹೆಚ್ಚು ಮಳೆಯಾದರೂ ಬೆಳೆಹಾನಿಯ ಪ್ರದೇಶ ತುಂಬಾ ಕಡಿಮೆ ಇದೆ. ಬೆಳೆಹಾನಿ ಯನ್ನು ಸರಿಯಾಗಿ ಪರಿಶೀಲಿಸಬೇಕು. ಕಳೆದ ಸಭೆಯಲ್ಲಿ ಕಳಪೆ ಗುಣಮಟ್ಟದ ಭತ್ತದ ಬೀಜ ವಿತರಣೆಯಿಂದ ರೈತರಿಗೆ ನಷ್ಟ ಉಂಟಾಗಿರುವ ಬಗ್ಗೆ ದೂರು ಬಂತಿತ್ತು. ಈ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳಲು ಹಾಗೂ ರೈತರಿಗೆ ಪರಿಹಾರವನ್ನು ಒದಗಿಸಲು ಸೂಚಿಸಲಾಗಿತ್ತು. ಆದರೆ ಸರಕಾರಕ್ಕೆ ಪತ್ರ ಬರೆದಿದ್ದೇವೆ ಎಂದರೆ ಅಷ್ಟೇ ಸಾಲದು. ಅದನ್ನು ನಿಯಮಿತವಾಗಿ ಅನುಕರಿಸಿ ರೈತರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಿ ಎಂದರು.

ಚೆಕ್‌ಡ್ಯಾಂಗಳಲ್ಲಿ ಅವ್ಯವಹಾರ?: ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯಡಿ ಸಣ್ಣ ಪ್ರಮಾಣದ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲು 6 ಕೋಟಿ ರೂ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಈ ಚೆಕ್ ಡ್ಯಾಂಗಳಲ್ಲಿ ನೀರು ನಿಲ್ಲದ ಸ್ಥಿತಿ ಇದೆ. ಈ ಚೆಕ್ ಡ್ಯಾಂಗಳ ನಿರ್ಮಾಣ ನಕ್ಷೆ ಅವೈಜ್ಞಾನಿಕವಾಗಿದ್ದು, ಅನುದಾನದ ಬಳಕೆಯೂ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಜಿಪಂ ಸಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಚಿವೆ ಹೆಬ್ಬಾಳ್ಕರ್ ಸೂಚನೆ ನೀಡಿದರು.

ರಾಜ್ಯದಲ್ಲಿ ಈ ಬಾರಿ ಉಂಟಾದ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು 8000 ಕೋಟಿ ರೂ. ಅನುದಾನವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಲಿದೆ ಎಂದು ಸಚಿವರು ತಿಳಿಸಿದರು. ವಾರಾಹಿ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಈವರೆಗೂ ಸರಕಾರದಿಂದ ಪರಿಹಾರ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ಪರಿಶೀಲಿಸಿ ಹಣ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದ ಸಚಿವರು, ಈ ಯೋಜನೆಯಲ್ಲಿ ಕೆಲವು ಜಮೀನುಗಳು ಡೀಮ್ಡ್ ಅರಣ್ಯ ಹಾಗೂ ಮೀಸಲು ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಪರಿಶೀಲಿಸಿ ಕೂಡಲೇ ಅನುಮತಿ ನೀಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕಂದಾಯ ಜಮೀನು, ಅರಣ್ಯ ಜಮೀನನ್ನು ಸ್ಪಷ್ಟವಾಗಿ ಗುರುತಿಸಲು ಸರ್ವೇ ಕಾರ್ಯವನ್ನು ಜಂಟಿಯಾಗಿ ಕಂದಾಯ, ಅರಣ್ಯ, ಗ್ರಾಮೀಮಾಭಿವೃದ್ಧಿ ಹಾಗೂ ಸರ್ವೇ ಇಲಾಖೆಗಳು ಜವಾಬ್ದಾರಿಯಿಂದ ಕೈಗೊಳ್ಳುವುದ ರೊಂದಿಗೆ ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದರು.

ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಹಾಳಾಗಿವೆ. ಇವುಗಳ ದುರಸ್ಥಿ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಲಕ್ಷ್ಮೀ ಹೆಬ್ಬಾಳ್ಕರ್, ಬಂದರು ಅಭಿವೃದ್ಧಿ ಕಾಮಗಾರಿಗಳಿಗೆ ಸಿಆರ್‌ಝಡ್ ಅನುಮತಿಯ ಅಗತ್ಯವಿದೆ. ಅದನ್ನು ಪಡೆಯಲು ಅನುಕೂಲ ಆಗುವಂತೆ ರಾಜ್ಯ ಮಟ್ಟದ ಸಿಆರ್‌ಝಡ್ ಸಮಿತಿ ರಚಿಸಬೇಕಿದ್ದು, ಈಗಾಗಲೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ, ಸಮಿತಿಯನ್ನು ತ್ವರಿತವಾಗಿ ರಚಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್‌ಕುಮಾರ್ ಕೊಡ್ಗಿ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ಮಂಜುನಾಥ ಭಂಡಾರಿ, ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಕೆಡಿಪಿಯ ನಾಮನಿರ್ದೇಶಿತ ಸದಸ್ಯರಾದ ಪ್ರಸನ್ನ ಕುಮಾರ್, ವೀಣಾ ಶೆಟ್ಟಿ, ಐಡಾ ಗಿಬ್ಬ ಡಿ ಸೋಜಾ, ಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.





 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News