ಬೀದಿನಾಯಿ ಹಾವಳಿ ತಡೆಗೆ ಸುಪ್ರೀಂ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಿ: ಅಧಿಕಾರಿಗಳಿಗೆ ಉಡುಪಿ ಡಿಸಿ ಕರೆ
ಉಡುಪಿ, ಮೇ 13: ನಗರ ಪ್ರದೇಶಗಳಲ್ಲಿ 7197 ಹಾಗೂ ಗ್ರಾಮೀಣ ಭಾಗದಲ್ಲಿ 13,185 ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸುಮಾರು 20,382 ಬೀದಿನಾಯಿಗಳನ್ನು ಗುರುತಿಸಲಾಗಿದೆ. ಅದೇ ರೀತಿ ಜಿಲ್ಲೆಯ ನಗರ ಭಾಗ ದಲ್ಲಿರುವ ಸರಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರಕಾರಿ ಕಚೇರಿ ಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 446 ಬೀದಿನಾಯಿ ಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ದೇಶದ ಸರ್ವೋಚ್ಛ್ಚ ನ್ಯಾಯಾಲಯವು ಹೊರಡಿಸಿರುವ ಆದೇಶ ದಲ್ಲಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿ ಅನುಷ್ಠಾನಕ್ಕೆ ತರಲು ಪ್ರತಿಯೊಬ್ಬರು ಮುಂದಾಗ ಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತೀ ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಬೀದಿ ನಾಯಿಗಳ ಉಪಟಳ ತಡೆಯಲು ನೇಮಕ ಮಾಡಲಾದ ನೋಡೆಲ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಹಳೆಯ ಕಟ್ಟಡ ಗಳನ್ನು ಗುರುತಿಸಿ, ಮಾಹಿತಿ ನೀಡು ವಂತೆ ತಿಳಿಸಿದ ಅವರು, ಬೀದಿನಾಯಿ ಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಪ್ರತೀ ತಾಲೂಕಿನಲ್ಲೂ ಆಶ್ರಯ ತಾಣಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದೆ. ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ ಹಾಗೂ ಕಾಪು ಪುರಸಭೆ, ಬೈಂದೂರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 11.91 ಎಕರೆ ಜಮೀನು ಮಂಜೂರು ಮಾಡಿದ್ದು, 33.93 ಲಕ್ಷ ರೂ. ಕ್ರಿಯಾ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‌ಗೆ ಒಂದರಂತೆ ಹಾಗೂ ಪ್ರತೀ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿ ಯಲ್ಲಿ ಬೀದಿನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ ವಿತರಣೆಗೆ ಸ್ಥಳಗಳನ್ನು ಗುರುತಿಸಿ, ನಾಮಫಲಕ ಅಳವಡಿಸಿರುವ ಕುರಿತು ಮಾಹಿತಿ ನೀಡುವಂತೆ ಅವರು ಸೂಚಿಸಿದರು.
ಗುರುತಿಸಿದ ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡದಲ್ಲಿ ಅಂತಹವರ ವಿರುದ್ಧ ಎಫ್.ಐ.ಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ಇಲಾಖೆಗೆ ತಿಳಿಸಿದರು.
ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಗಳು ಬೀದಿನಾಯಿಗಳ ಗುರುತಿಸುವಿಕೆ, ಸ್ಥಳಾಂತರ, ಸಂತಾನಹರಣ ಶಸ್ತ್ರಚಿಕಿತ್ಸೆ, ಆಶ್ರಯತಾಣ, ಮತ್ತಿತರ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಬೀದಿ ನಾಯಿಗಳ ನಿಯಂತ್ರಣ ಕುರಿತು ಸ್ಥಾಪಿಸಲಾದ ಸಹಾಯವಾಣಿಯಲ್ಲಿ ದಾಖಲಾಗುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿನಾಯಿ ಹಿಡಿಯುವ ಸಿಬ್ಬಂದಿಗಳನ್ನು ತರಬೇತಿ ನೀಡಿ ನಿಯೋಜಿಸಬೇಕು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚು ನಾಯಿ ಕಡಿತ ಪ್ರಕರಣಗಳಾದರೂ ಸಹ 2026ರ ಮಾರ್ಚ್‌ನಿಂದ ಈವರೆಗೆ ಒಂದೇ ಒಂದು ಬೀದಿನಾಯಿಯನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡದಿರುವ ಬಗ್ಗೆ ಜಿಲ್ಲಾಧಿಕಾರಿ ಆಕ್ಷೇಪ ವ್ಯಕ್ತಪಡಿಸಿದರು. ತಕ್ಷಣವೇ ಬೀದಿನಾಯಿ ಹಿಡಿಯುವ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮತೆಗೆದುಕೊಳ್ಳುವಂತೆ ತಿಳಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿಗಳನ್ನು ಸಂತಾನಹರಣ ಶಸ್ತ್ರಚಿಕಿತ್ಸೆ, ಎ.ಆರ್. ಲಸಿಕೆ ನೀಡುವುದರೊಂದಿಗೆ ಅವುಗಳನ್ನು ಆಕರ್ಷಣೀಯವಾಗಿ ಕಾಣುವಂತೆ ಮಾಡಬೇಕು. ಶ್ವಾನ ಪ್ರದರ್ಶನ, ದತ್ತು ಸ್ವೀಕಾರ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ನಾಯಿಗಳನ್ನು ಸಾರ್ವಜನಿಕರು ದತ್ತು ಪಡೆಯುವಂತೆ ಪ್ರೇರೇಪಿಸಬೇಕು ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ, ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ.ಬಾಬಣ್ಣ, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.