×
Ad

ಉಡುಪಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲು ಪಣತೊಡಿ: ನ್ಯಾ.ಪುರುಷೋತ್ತಮ್

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Update: 2026-06-12 20:56 IST

ಉಡುಪಿ: ಬಾಲಕಾರ್ಮಿಕ ಪದ್ಧತಿ ಸಮಾಜದ ಅನಿಷ್ಠಗಳಲ್ಲಿ ಒಂದಾಗಿದ್ದು, ಇದು ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವ ಜೊತೆಗೆ ಶಿಕ್ಷಣ ವಂಚಿತರನ್ನಾಗಿ ಮಾಡುತ್ತದೆ. ಆದ್ದರಿಂದ ಉಡುಪಿ ಜಿಲ್ಲೆ ಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ್ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಉಡುಪಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲು ಇಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತಳ ಮಟ್ಟದಲ್ಲೇ ನಿರ್ಮೂಲನೆ ಮಾಡುವ ಅಗತ್ಯವಿದೆ ಎಂದ ಅವರು, ಮಕ್ಕಳು ತಮ್ಮ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಹಾಗೂ ಅವರುಗಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆ ಗಳನ್ನು ಜಾರಿಗೆ ತಂದಿದ್ದು, ಮಕ್ಕಳು ಇದರಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಾವು ಇಂದೂ ಸಹ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸುತ್ತಿರುವುದು ಈ ಪದ್ಧತಿ ಇನ್ನೂ ಸಮಾಜ ದಲ್ಲಿ ಮುಂದುವರಿ ಯುತ್ತಿರುವುದರ ದ್ಯೋತಕ. ಪೋಷಕರು ಮಕ್ಕಳ ಜೀವನವನ್ನು ರೂಪಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸದೇ ಇದ್ದಲ್ಲಿ ಬಾಲಕಾರ್ಮಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಎಲ್ಲಾ ಪೋಷಕರು ಹೀಗಾಗದಂತೆ ಎಚ್ಚರವಹಿಸಬೇಕು ಎಂದರು.

ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ನೆರವಾಗಬೇಕಿದೆ ಎಂದು ಎಂ.ಪುರುಷೋತ್ತಮ್ ಕಿವಿಮಾತು ಹೇಳಿದರು.

ಬಾಲಕಾರ್ಮಿಕರಾಗಿ ದುಡಿಯುವ ಮಕ್ಕಳು ಬಂದ ಹಣದಿಂದ ತಂಬಾಕು, ಧೂಮಪಾನ ಸೇರಿದಂತೆ ಮಾದಕ ವ್ಯಸನಕ್ಕೆ ತುತ್ತಾಗಿ, ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಇಲಾಖೆಗೆ ಸಹಕಾರ ನೀಡಬೇಕು ಎಂದರು.

ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಮಕ್ಕಳ ಬಾಲ್ಯವನ್ನು ರಕ್ಷಿಸಿ, ಅವರುಗಳಿಗೆ ಶಿಕ್ಷಣ ನೀಡುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಈ ದಿನದ ಮುಖ್ಯ ಉದ್ದೇಶ. 14 ವರ್ಷದೊಳಗಿನ ಯಾವುದೇ ಮಗು ಹೋಟೆಲ್, ಕಾರ್ಖಾನೆ ಸೇರಿದಂತೆ ವಿವಿದೆಡೆಗಳಲ್ಲಿ ದುಡಿಯುತ್ತಿರುವುದು ಕಂಡುಬಂದಲ್ಲಿ ಅವರ ಮನ ವೊಲಿಸಿ, ಶಿಕ್ಷಣ ಪಡೆಯುವಂತೆ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ನಿಯೋಜಿಸುವುದು ಹಾಗೂ 14 ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕೈಗಾರಿಕೆಗಳು ಅಥವಾ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಯಾವುದೇ ಮಗು ಬಾಲಕಾರ್ಮಿಕ ಪದ್ಧತಿಗೆ ಬಲಿಯಾಗಿದ್ದರೆ ಅಥವಾ ದುಡಿಯುತ್ತಿರುವುದು ಕಂಡುಬಂದಲ್ಲಿ ಕಾರ್ಮಿಕ ಇಲಾಖೆಗೆ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಸಂಬಂಧಪಟ್ಟ ಇಲಾಖೆ ಆ ಮಗುವನ್ನು ರಕ್ಷಿಸಿ, ಶಿಕ್ಷಣ ದೊಂದಿಗೆ ಪುನರ್ವಸತಿ ಕಲ್ಪಿಸಲಿದ್ದಾರೆ ಎಂದರು.

ಉಡುಪಿ ಛೇಂಬರ್ ಆಫ್ ಕಾಮರ್ಸ್‌ನ ಪ್ರಧಾನ ಕಾರ್ಯದರ್ಶಿ ಡಾ. ವಿಜಯೇಂದ್ರ ಮಾತನಾಡಿದರು. ಇದೇ ಸಂದರ್ಭ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಕುರಿತು, ಮೂಡಬಿದ್ರಿ ಅಲಂಗಾರ್‌ನ ಹೆಲ್ಪ್ ಟ್ರಸ್ಟ್ ಇವರಿಂದ ಬೀದಿ ನಾಟಕ ಪ್ರದರ್ಶಿಸಲ್ಪಟ್ಟಿತು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ, ತಾಲೂಕು ಕಾರ್ಮಿಕ ವೃತ್ತ ನಿರೀಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಕುಮಾರ್ ಸಿ.ಹೆಚ್. ಸ್ವಾಗತಿಸಿದರು.ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿ, ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ ವಂದಿಸಿದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News