ಕೋಟ ನೂತನ ಪ್ರವಾಸಿ ಮಂದಿರ ಉದ್ಘಾಟನೆಗೆ ಸಿದ್ಧ
Update: 2026-06-26 20:30 IST
ಕೋಟ, ಜೂ.26: ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕುಂದಾಪುರ ಶಾಸಕರಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಬ್ರಹ್ಮಾವರ ತಾಲೂಕು ಕೋಟ ಹೋಬಳಿಯ ನೂತನ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿ ಇದೀಗ ಪೂರ್ಣ ಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಕೋಟದ ನೂತನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಸುಂದರವಾಗಿ ನಿರ್ಮಾಣಗೊಂಡಿರುವ ಕಟ್ಟಡವನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.
ಸುಮಾರು ಐದು ಕೋಟಿ ರೂ.ವೆಚ್ಚದ ಪ್ರವಾಸಿ ಮಂದಿರ ಕಟ್ಟಡ ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣ ಗೊಂಡಿದೆ. ಹೊಸ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೋಟ, ನಮ್ಮೂರಿನಲ್ಲಿ ಇಂತಹ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣವಾಗಿರುವುದು ಖುಷಿ ತಂದಿದೆ ಎಂದರು. ಸಂಸದರೊಂದಿಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.