ಉಡುಪಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ
ಉಡುಪಿ, ಜೂ.29: ಕೆಂಪೇಗೌಡ ನಿರ್ಮಿಸಿದ ಬೆಂಗಳೂರು ನಗರ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲಿದ್ದು, ನಾಡಿನ ಭವಿಷ್ಯದ ದೃಷ್ಟಿಯಿಂದ ಅಂದು ಜಾರಿಗೆ ತಂದ ಹಲವು ಜನಪ್ರಿಯ ಯೋಜನೆಗಳಿಂದ ಇಂದು ಬೆಂಗಳೂರು ಇಡೀ ವಿಶ್ವದ ಗಮನವನ್ನು ಸೆಳೆದಿದೆ ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದ್ದಾರೆ.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮೂಲಭೂತ ಸೌಕರ್ಯ ಗಳನ್ನು ಒದಗಿಸುವುದರೊಂದಿಗೆ ಬೆಂಗಳೂರಿನ ಇಂದಿನ ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಕೇವಲ ಒಂದೇ ಜಾತಿಗೆ ಸೀಮಿತವಾಗಿರದೇ ಸರ್ವಧರ್ಮಿಯರನ್ನೂ ಸಮಾನವಾಗಿ ಕಾಣುತ್ತಿದ್ದ ಕೆಂಪೇಗೌಡರ ಆದರ್ಶಗಳು ನಮ್ಮೆಲ್ಲರಿಗೂ, ಮುಂದಿನ ಪೀಳಿಗೆಗೂ ಮಾದರಿಯಾಗಿದೆ ಎಂದರು.
ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿ ಮಾತನಾಡಿದ ನಿವೃತ್ತ ಉಪನ್ಯಾಸಕ ದಯಾನಂದ ಡಿ ಕಿದಿಯೂರು, ನಾಡಪ್ರಭು ಕೆಂಪೇಗೌಡರು ಪ್ರಗತಿಪರ ಚಿಂತನೆಯನ್ನು ಹೊಂದಿದ್ದರು. ಸಮಾಜದಲ್ಲಿದ್ದ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ವೃತ್ತಿ ಆಧಾರಿತವಾಗಿ ಜನರ ಆರ್ಥಿಕ ಅಭಿವೃದ್ಧಿಗೆ ಅನೇಕ ಪೇಟೆಗಳನ್ನು ನಿರ್ಮಿಸಿದ್ದರು. ಅಪಾರವಾದ ಪರಿಸರ ಕಾಳಜಿಯನ್ನು ಹೊಂದಿದ್ದ ಕೆಂಪೇಗೌಡರು ಕೃಷಿ ಮತ್ತು ಕುಡಿಯುವ ನೀರಿಗಾಗಿ ಹಲವು ಕೆರೆಗಳ ನಿರ್ಮಾಣವನ್ನು ವೈಜ್ಞಾನಿಕವಾಗಿ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಕಾರ್ಯದರ್ಶಿ ಹೇಮಾನಂದ ಹಲ್ದಡ್ಕ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಸರಕಾರಿ ಬಾಲಕಿಯರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಇಂದಿರಾ ಬಿ ವಂದಿಸಿದರು.