×
Ad

ಅಲೆವೂರಿನ ಕೇಂದ್ರಿಯ ವಿದ್ಯಾಲಯಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

"ಶೀಘ್ರವೇ ನೂತನ ಕಟ್ಟಡ ಕೇಂದ್ರ ಸಚಿವರಿಂದ ಉದ್ಘಾಟನೆ"

Update: 2026-07-10 22:00 IST

ಉಡುಪಿ, ಜು.10: ಅಂದಾಜು 28 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಲೆವೂರಿನಲ್ಲಿ ನಿರ್ಮಾಣಗೊಂಡಿರುವ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.

ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲೆಯ ವಿದ್ಯಾರ್ಥಿ ಗಳಿಗೆ ಅತ್ಯುತ್ತಮ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರಕಾರದಿಂದ ನಿರ್ಮಾಣಗೊಂಡಿರುವ ಈ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡವನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಸಚಿವರ ಸಮ್ಮುಖದಲ್ಲಿ ಉದ್ಘಾಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.

ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾಭ್ಯಾಸ ನಡೆಸಲು ಈ ಕಟ್ಟಡ ಸಹಕಾರಿಯಾಗಲಿದೆ ಎಂದು ತಿಳಿಸಿದ ಸಂಸದರು, ಅಲ್ಲಿರುವ ಪ್ರತಿಯೊಂದು ತರಗತಿ ಕೊಠಡಿಗೂ ಭೇಟಿ ನೀಡಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿದರು. ಶಾಲೆಯಲ್ಲಿನ ಕಲಿಕಾ ವಾತಾವರಣ, ವಿದ್ಯಾರ್ಥಿಗಳ ಯೋಗಕ್ಷೇಮ, ಶೈಕ್ಷಣಿಕ ಚಟುವಟಿಕೆ ಗಳು ಹಾಗೂ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ಪ್ರಸ್ತುತ ಶಾಲೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ಯವರೆಗೆ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ 1ರಿಂದ 5ನೇ ತರಗತಿವರೆಗೆ ಹೆಚ್ಚುವರಿ ತರಗತಿಗಳಿಗೆ ಅನುಮೋದನೆ ದೊರೆತಿದ್ದು, ಅವುಗಳ ತರಗತಿಗಳೂ ಆರಂಭ ವಾಗಿವೆ.

ಸಂಸದ ಭೇಟಿ ವೇಳೆ ಉಪಸ್ಥಿತರಿದ್ದ ಕೇಂದ್ರಿಯ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ವಸಂತ ಅವರು, ಮಣಿಪಾಲ ದಿಂದ ಅಲೆವೂರಿನ ಕೇಂದ್ರಿಯ ವಿದ್ಯಾಲಯದವರೆಗೆ ಬಸ್ ವ್ಯವಸ್ಥೆ, ಸಂಸ್ಥೆಗೆ ಜನರೇಟರ್ ವ್ಯವಸ್ಥೆ, ಮೇಲ್ಚಾವಣಿ ಹಾಗೂ ಸಂಪರ್ಕ ರಸ್ತೆ ದುರಸ್ತಿಗೊಳಿಸುವಂತೆ ಸಂಸದರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಪರಿಶೀಲಿಸಿ ಕೂಡಲೇ ಬಸ್, ಜನರೇಟರ್, ಮೇಲ್ಛಾವಣೆ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ಸಂಸದರು ತಿಳಿಸಿದರು. 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News