‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ: ಕುತ್ಯಾರು ನವೀನ್ ಶೆಟ್ಟಿ
ಉಡುಪಿ, ಜು.11: ರಾಜ್ಯ ಸರಕಾರ ಹೊರಡಿಸಿರುವ ’ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧ ವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆರೋಪಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಭಾರತದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವದ ತತ್ವ ಕಲ್ಪಿಸಿದ್ದು, ರಾಜ್ಯ ಸರಕಾರ ’ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡುವ ಮೂಲಕ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿದೆ ಎಂದು ಅವರು ಆರೋಪಿಸಿದರು.
ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ’ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗ ರಚಿಸುವುದು ಸಂವಿಧಾನದ 14ನೇ ವಿಧಿಯ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ. ಇಂತಹ ವರ್ಗೀಕರಣ ಯಾವುದೇ ಕಾನೂನುಬದ್ಧ ಉದ್ದೇಶ ಹೊಂದಿಲ್ಲ ಎಂದು ಕುತ್ಯಾರು ಹೇಳಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ರಾಜ್ಯ ಸರಕಾರ ’ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡುವ ಮೂಲಕ ಮತದಾರರಲ್ಲದವರಿಗೂ ಪೌರತ್ವ ನೀಡುವ ಪ್ರಯತ್ನ ಮಾಡುತ್ತಿದೆ. ಇದು ಭಾರತದ ಸಂವಿಧಾನಕ್ಕೆ ವಿರುದ್ಧ ವಾಗಿದ್ದು, ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕಾರಣದ ಉದ್ದೇಶದಿಂದ ಈ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಟೀಕಿಸಿದರು.
ಈ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗು ವುದು ಎಂದು ಅವರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರರಾದ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.