ಉಡುಪಿ: ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಹರಿಯ ಬಿಡುತ್ತಿರುವುದರಿಂದ, ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಡೆಂಗಿ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಜೊತೆಗೆ ನಗರ ವ್ಯಾಪ್ತಿಯಲ್ಲಿ ಹರಿಯುವ ಇಂದ್ರಾಣಿ ನದಿಯ ನೀರು ಕಲುಷಿತಗೊಂಡಿದೆ.
ಆದ್ದರಿಂದ ಸಾರ್ವಜನಿಕರು ತಮ್ಮ ಮನೆ, ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಲೇಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಮಳೆ ನೀರಿನ ಚರಂಡಿಗೆ ಮತ್ತು ಇಂದ್ರಾಣಿ ನದಿಗೆ ಪೈಪ್ ಮೂಲಕ ನೇರವಾಗಿ ಬಿಡುತ್ತಿರುವವರು ಪೈಪ್ ಅನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ.
ತಪ್ಪಿದಲ್ಲಿ ನಗರಸಭೆ ವತಿಯಿಂದ ಜುಲೈ 18ರಂದು ಇವುಗಳನ್ನು ತೆರವು ಗೊಳಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.