ಪ್ರತಿಭಟನಾಕಾರರ ಮೇಲಿನ ದೌರ್ಜನ್ಯ ಪ್ರಜಾಪ್ರಭುತ್ವದ ಕಗ್ಗೊಲೆ: ಎಂ.ಎ.ಗಫೂರ್

ದಿಲ್ಲಿಯ ಪೊಲೀಸ್ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2026-07-22 20:35 IST

ಉಡುಪಿ: ಹೊಸದಿಲ್ಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ನಡೆದ ದೌರ್ಜನ್ಯವು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕರ್ನಾಟಕ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಹೊಸದಿಲ್ಲಿಯಲ್ಲಿ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದುದು ಎಂದು ಆರೋಪಿಸಿದ ಅವರು ಇದು ಜನಸಾಮಾನ್ಯರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಇದನ್ನು ಎಷ್ಟು ಮಾತ್ರಕ್ಕೂ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಘಟನೆಗಳಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು ಹಾಗೂ ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ಮತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ದಿಲ್ಲಿಯಲ್ಲಿ ಶಾಂತಿಯುತವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಗೂಂಡಾಗಳನ್ನು ಕಳುಹಿಸಿ ಪ್ರತಿಭಟನೆ ಮೊಟಕು ಗೊಳಿಸುವಂತೆ ಮಾಡಲಾಗಿದೆ. ನಿನ್ನೆ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದು ಖಂಡನೀಯ ಎಂದರು.

ಎನ್‌ಎಸ್‌ಯುಐನ ಜಿಲ್ಲಾ ಅಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಧರ್ಮೇಂದ್ರ ಪ್ರಧಾನ್ ಅವರ ಕುಮ್ಮಕ್ಕಿನಿಂದ ನಡೆದಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಬ್ರಹ್ಮಗಿರಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲು ಪ್ರಯತ್ನಿ ಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಳೇಬೈಲ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ, ಡಾ.ಸುನೀತಾ ಶೆಟ್ಟಿ, ರೋಶನ್ ಒಲಿವರಾ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ನಾಗೇಶ್ ಉದ್ಯಾವರ ಸೇರಿದಂತೆ ಹಲವರು ಭಾಗವಹಿಸಿದ್ದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News