ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ
ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳ ದಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನಂತೆ ಅನ್ವಯ ಕಾರ್ಮಿಕ ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ಉತ್ತರ ಪ್ರದೇಶ ಮೂಲದ ಓರ್ವ ಬಾಲ ಕಾರ್ಮಿಕ ನನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದಾರೆ.
ಕಟ್ಟಡದ ಮಾಲಕರು/ನಿಯೋಜಕರು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅಥವಾ ಇನ್ಯಾವುದೇ ಕೆಲಸದಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳ ಬಾರದು. ಬೇರೆ ರಾಜ್ಯದಿಂದ ಕಾರ್ಮಿಕರನ್ನು ಕರೆ ತರುವಾಗ ಮೂಲ ದಾಖಲೆ ಯನ್ನು ಪರಿಶೀಲಿಸಿ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಸಿ.ಎಚ್ ತಿಳಿಸಿ ದ್ದಾರೆ. ಈ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಮಾಲಕರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗು ವುದು ಎಂದು ಹೇಳಿದ್ದಾರೆ.
ಉಡುಪಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹಮದ್ ಈ ಬಗ್ಗೆ ಮಾತನಾಡಿ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು. ಹಾಗೂ ಅದನ್ನು ಪ್ರತಿ ಮಗುವಿಗೂ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986ರ ಅನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳು ವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ವಾರೆಂಟ್ ರಹಿತ ಬಂಧಿಸಬಹುದಾದ ಅಪರಾಧವಾಗಿದೆ.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿ ಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲಕರಿಗೆ ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20,000ರೂ.ನಿಂದ 50,000 ರೂ.ಗಳವರೆಗೆ ದಂಡ ಅಥವಾ ಎರಡನ್ನು ವಿಧಿಸುವ ಅವಕಾಶವಿರುತ್ತದೆ ಅಲ್ಲದೇ ಒಂದು ವಷರ್ದಿಂದ ಮೂರು ವಷರ್ಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.
ಅಲ್ಲದೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷೆಗೆ ಅವಕಾಶವಿದ್ದು, ಪುನರಾವರ್ತಿತ ಅಪರಾಧಕ್ಕೆ 10,000ರೂ.ಗಳ ದಂಡ ವಿಧಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಸಿ.ಎಚ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕಿ ಅಮೃತ ಹಾಗೂ ಮಕ್ಕಳ ರಕ್ಷಣಾ ಘಟಕದ ಸಾಮಾಜಿಕ ಕಾರ್ಯಕರ್ತೆ ನಯನ ಭಾಗವಹಿಸಿದ್ದರು.