ಯುವಜನರಲ್ಲಿ ಕಾನೂನು ಅರಿವಿನ ಕೊರತೆಯೇ ಅಪರಾಧ ಕೃತ್ಯ ಹೆಚ್ಚಳಕ್ಕೆ ಕಾರಣ: ರಾಘವೇಂದ್ರ ಎಸ್.
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಉಡುಪಿ: ಯುವಜನರಲ್ಲಿ ಕಾನೂನಿನ ಅರಿವಿನ ಕೊರತೆಯಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಪ್ರೀತಿ, ಪ್ರೇಮ ಹಾಗೂ ಉದ್ಯೋಗದ ಆಮಿಷಗಳಿಗೆ ಹದಿಹರೆಯದವರು ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಭಿರಕ್ಷಕ ರಾಘವೇಂದ್ರ ಎಸ್. ಹೇಳಿದ್ದಾರೆ.
ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.
ಮಾನವ ಕಳ್ಳಸಾಗಣೆ, ಮಾದಕ ವಸ್ತುಗಳ ಬಳಕೆ, ಭಿಕ್ಷಾಟನೆ ಹಾಗೂ ಆಧುನಿಕ ಜೀತ ಪದ್ಧತಿಯಂತಹ ಸಮಾಜ ವಿರೋಧಿ ಕೃತ್ಯಗಳಲ್ಲಿ ಯುವ ಜನರು ತೊಡಗಿಸಿಕೊಳ್ಳುತ್ತಿರುವುದು ಶೋಚನೀಯ. ಮಾದಕ ವಸ್ತುಗಳ ಸೇವನೆ, ಸಾಗಣೆ ಹಾಗೂ ಸ್ವಾಧೀನವೂ ಶಿಕ್ಷಾರ್ಹವಾಗಿದ್ದು, ಈ ಕುರಿತು ಯುವಜನರಲ್ಲಿ ಸೂಕ್ತ ಕಾನೂನು ಅರಿವು ಮೂಡಿಸುವುದು ಅಗತ್ಯ ಎಂದು ಅವರು ತಿಳಿಸಿದರು.
ಝೀರೊ ಎಫ್‌ಐಆರ್, ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ ಸೇರಿದಂತೆ ಪ್ರಮುಖ ಕಾನೂನುಗಳ ಕುರಿತು ನಾಗರಿಕರು ಅರಿವು ಹೊಂದಿರ ಬೇಕು ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ಕಾನೂನಿನ ಕುರಿತು ಸೂಕ್ತ ಜ್ಞಾನವನ್ನು ಪಡೆದುಕೊಂಡು, ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ರಕ್ಷಿತ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ರಾಜೇಂದ್ರ ಕೆ. ಸ್ವಾಗತಿಸಿದರು. ವಿದ್ಯಾರ್ಥಿನಿ ಮಂಗಳ ಕಾರ್ಯಕ್ರಮ ನಿರೂಪಿಸಿದರು. ನಿಸರ್ಗ ಪ್ರಾರ್ಥಿಸಿದರು. ಕಾಲೇಜಿನ ಗ್ರಂಥಪಾಲಕ ವೆಂಕಟೇಶ್ ವಂದಿಸಿದರು.