ಕೆಮ್ಮಣ್ಣು ಭಾಗದ ವಿದ್ಯುತ್ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದ ದೂರು; ಉಡುಪಿ ಶಾಸಕರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Update: 2026-08-06 20:07 IST

ಉಡುಪಿ : ತೋನ್ಸೆ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಗ್ರಾಮದ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಕೆಮ್ಮಣ್ಣು ಭಾಗದ ವಿದ್ಯುತ್ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ದೂರಿದರು. ಈ ಬಗ್ಗೆ ಈಗಾಗಲೇ ಸಬ್ ಸ್ಟೇಷನ್ ಮಂಜೂರಾಗಿದ್ದು, ಸರಕಾರಿ ಜಾಗ ಅಂತಿಮಗೊಳಿಸಿದ ಬಳಿಕ ಸಮಸ್ಯೆ ಪರಿಹರಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಅಗತ್ಯ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತುರ್ತು ಸ್ಪಂದಿಸುವಂತೆ ಸೂಚಿಸುವುದಾಗಿ ಶಾಸಕರು ತಿಳಿಸಿದರು.

ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಮುಂತಾದ ಪಿಂಚಣಿಗಳು ರದ್ದಾಗಿರುವ ಬಗ್ಗೆ ಹಿಂದಿನ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದು, ಸಮಸ್ಯೆ ಈವರೆಗೆ ಬಗೆಹರಿದಿರುವುದಿಲ್ಲ. ಈ ಕುರಿತು ಮತ್ತೊಮ್ಮೆ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯುವುದಾಗಿ ಶಾಸಕರು ತಿಳಿಸಿದರು.

ಕೆಮ್ಮಣ್ಣಿನ ತಿಮ್ಮಣ್ಣ ಕುದ್ರುವಿನಿಂದ ಹಾರಾಡಿವರೆಗೆ ಸೇತುವೆ ನಿರ್ಮಿಸಿದರೆ ಬ್ರಹ್ಮಾವರ ತಲುಪುವ ಜನರಿಗೆ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಸಭೆಯಲ್ಲಿ ಬೇಡಿಕೆ ಮುಂದಿಟ್ಟರು. ಹೂಡೆ ಪರಿಸರದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯದೆ ನಿಯಮ ಮೀರಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಅದೇ ರೀತಿ ಹಲವು ಕಟ್ಟಡಗಳಿಗೂ ನಿಯಮ ಮೀರಿ ಅನುಮತಿ ನೀಡಿರುವ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಸ್ಪಂದಿಸಿದ ಶಾಸಕರು ಈ ಕುರಿತು ಸಮಗ್ರ ತನಿಖೆ ನಡೆಸಿ, ಕಾನೂನು ಮೀರಿ ಕೆಲಸ ನಿರ್ವಹಿಸಿದ ಅಧಿಕಾರಿಗಳಿಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಕೆಮ್ಮಣ್ಣಿನಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯ ದಿನ ರಸ್ತೆ ಬದಿ ವಾಹನಗಳ ಪಾರ್ಕಿಂಗ್‌ನಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆಯ ಬಗ್ಗೆ ಆಗತ್ಯ ಕ್ರಮ ವಹಿಸುವಂತೆ ಶಾಸಕರು ಪೋಲಿಸ್ ಇಲಾಖೆಗೆ ಸೂಚಿಸಿ ಪ್ರತಿ ಗುರು ವಾರ ಈ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ, ಮಲ್ಪೆ ವೃತ್ತದ ಪೋಲಿಸ್ ನಿರೀಕ್ಷಕ ರಾಮಚಂದ್ರ ನಾಯಕ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಅನುಷಾ, ಉಡುಪಿ ನಗರ ಪ್ರಾಧಿಕಾರದ ನಗರ ಯೋಜನಾ ಸದಸ್ಯ ಸಚಿನ್, ಮಲ್ಪೆ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಪಂ ನಿಕಟ ಪೂರ್ವ ಸದಸ್ಯರುಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News