ಉಡುಪಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ
ಉಡುಪಿ, ಆ.7: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವನ್ನು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥ ಪೂರ್ಣ ಹಾಗೂ ಸಂಭ್ರಮ - ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹ ಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಧ ಶಾಲಾ-ಕಾಲೇಜು ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಪಥಸಂಚಲನಕ್ಕೆ ಸಂಬಂಧಿಸಿದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸ್ವಚ್ಛತೆ, ಪರಿಸರ ಸಂರಕ್ಷಣೆ, ಸ್ವಾಸ್ಥ್ಯ ಉಡುಪಿ, ಪ್ರವಾಸೋದ್ಯಮ ಕುರಿತು ಸಂದೇಶ ಸಾರುವ ವೈಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ಗಣ್ಯರನ್ನು ಸನ್ಮಾನಿಸಲಾಗುವುದು. ಅಲ್ಲದೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು, ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿ ಗಳನ್ನು ರಚಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಲಾಯಿತು. ಉಪಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಅಚ್ಚುಕಟ್ಟಾಗಿ ಮಾಡುವಂತೆ ಸೂಚನೆ ನೀಡಿರು.
ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಡಿಹೆಚ್‌ಓ ಡಾ. ಬಸವರಾಜ್ ಹುಬ್ಬಳ್ಳಿ, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.