ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣನವರ್ ಕರೆ
ಉಡುಪಿ: ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟನೆ
ಉಡುಪಿ, ಸೆ.15: ದೇಶದ ಯುವ ಜನತೆ ಮತ್ತು ನಾಗರಿಕರು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತಂತೆ ಅರಿವು ಮೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯೋಜಿಸಿರುವ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.
ಯುವಜನತೆಗೆ ಸಂವಿಧಾನದ ಹಕ್ಕು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಂವಿಧಾನದ ಮೌಲ್ಯಗಳ ಬಗ್ಗೆ ಪ್ರತಿ ಯೊಬ್ಬರಲ್ಲೂ ಅರಿವು ಇದ್ದಾಗ ಮಾತ್ರ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದರು.
ನಮ್ಮ ಸಂವಿಧಾನ ದೇಶದ ಪ್ರತೀ ಪ್ರಜೆಗೂ ಸ್ವತಂತ್ರವಾಗಿ ಬದುಕಲು ಅವಕಾಶ ಮಾಡಿಕೊಟ್ಟಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಡಿಯಲು, ಮಾನವ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಸಾರ್ವಜನಿಕರ ಭಾಗವಹಿ ಸುವಿಕೆ ಯನ್ನು ಬಲಪಡಿಸಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯನ್ನು ಆಚರಿಸಲಾಗುತ್ತಿದೆ ಎಂದವರು ವಿವರಿಸಿದರು.
ಸಂಸತ್ತು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿರುವ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಭಾರತವೂ ಒಂದು. ಭಾರತದ ಭೂವಿಸ್ತಾರವನ್ನು ಗಮನಿಸಿದಾಗ ಜನಸಂಖ್ಯೆ, ಸಂಸ್ಕೃತಿ, ಸಾಮಾಜಿಕ ವೈಧ್ಯತೆಗಳು, ವಿಚಾರಗಳಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬಹುದು ಎಂದರು.
ಮಕ್ಕಳು ಪ್ರಜಾಪ್ರಭುತ್ವದ ಬಗ್ಗೆ ಅರಿತು ಅದರ ಕಾರ್ಯಕ್ಷಮತೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಲು ಯುವ ಸಂಸತ್ತು ಕಾರ್ಯಕ್ರಮ ಒಂದು ಉತ್ತಮ ವೇದಿಕೆ. ಯುವ ಸಂಸತ್ತು ಸಭೆಗಳು ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳುಗಳ ಕಾಲ ನಡೆಯಲಿದ್ದು, ಶಾಲಾ-ಕಾಲೇಜುಗಳಲ್ಲಿ ಉತ್ತಮ ವಾಕ್ ಚಾತುರ್ಯವುಳ್ಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸು ವಂತೆ ತಿಳಿಸಿದ ಅವರು, ಸಂಸತ್ತಿಗೆ ತನ್ನದೇ ಆದ ಪಾವಿತ್ರ್ಯತೆ ಇದ್ದು, ವಿದ್ಯಾರ್ಥಿಗಳು ಅದನ್ನರಿತು, ಅದರ ಮೌಲ್ಯಗಳನ್ನು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. ವಿಶ್ವದಲ್ಲಿ ಅತೀ ಹೆಚ್ಚು ಯುವ ಸಂಪತ್ತು ಹೊಂದಿರುವ ನಮ್ಮ ದೇಶದ ಯುವಜನತೆಯಲ್ಲಿ ಸಂವಿಧಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ರೂಢಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕರಲ್ಲಿಯೂ ಪರಸ್ಪರ ಪ್ರೀತಿ, ವಿಶ್ವಾಸ ಬೆಳೆಸುವ ಕೆಲಸ ಮಾಡಿದಾಗ ಪ್ರಜಾಪ್ರಭುತ್ವದ ಆಶಯಗಳು ಯಶಸ್ವಿಯಾಗುತ್ತದೆ. ಪ್ರತಿಯೊಬ್ಬ ಅರ್ಹರಿಗೂ ಮತದಾನದ ಹಕ್ಕನ್ನು ಪ್ರಜಾಪ್ರಭುತ್ವ ಕಲ್ಪಿಸಿದೆ. ಯುವಜನತೆ ನಮ್ಮ ದೇಶದ ಆಸ್ತಿ. ದೇಶದ ಅಭಿವೃದ್ಧಿಗೆ ಶ್ರಮಿಸುವ ಜನನಾಯಕನನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಅವರಿಗೆ ನೀಡಿದೆ ಎಂದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸಂವಿಧಾನದ ಪೀಠಿಕೆ ಬೋಧಿಸಿ ಮಾತನಾಡಿ, ಕಳೆದ ಎರಡು-ಮೂರು ವರ್ಷಗಳಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿನೂತನ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಶಾಲಾ-ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಗಳನ್ನು ಆಯೋಜಿಸಿ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶವಿದೆ ಎಂದರು.
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರವೀಣ ಮೊಗವೀರ ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಯುವ ಸಂಸತ್ತು ಕಾರ್ಯಕ್ರಮದ ಪೋಸ್ಟರ್ ಅನ್ನು ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮನಿರೂಪಿಸಿ, ವಂದಿಸಿದರು.