ಕುಂದಾಪುರ, ಸೆ.16: ಮೀನುಗಾರಿಕೆ ವಲಯದ ಜ್ವಲಂತ ಸಮಸ್ಯೆಗಳ ಕುರಿತು ಅರಿಯಲು, ಪರಿಶೀಲನೆ ನಡೆಸುವ ಉದ್ದೇಶದಿಂದ ಕರಾವಳಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮೀನುಗಾರರಿಗೆ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಕ್ರಮ ವಹಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಯಿಂದ ಮರವಂತೆ ಬಂದರು ಸಂಪರ್ಕ ರಸ್ತೆ ಸಂಪೂರ್ಣ ಹಾಳಾಗಿದ್ದು, ಅಂದಾಜು ಪಟ್ಟಿ ಸಿದ್ಧಪಡಿಸಿ ಹೊಸ ರಸ್ತೆ ನಿರ್ಮಾಣ ಮಾಡಿಕೊಡಲಾಗುವುದು. ಮೀನುಗಾರರ ಹಿತವನ್ನು ಕಾಯಲು ಸರಕಾರ ಬದ್ಧವಾಗಿದೆ ಎಂದು ರಾಜ್ಯದ ಮುಜರಾಯಿ, ಮೀನುಗಾರಿಕೆ, ಬಂದರು ಇಲಾಖೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಮರವಂತೆ ಹೊರಬಂದರು ಪ್ರದೇಶಕ್ಕೆ ಬುಧವಾರ ಭೇಟಿ ನೀಡಿದ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು, ಮೀನುಗಾರ ಮುಖಂಡರೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು ಮಾತನಾಡುತಿದ್ದರು.

ಮೀನುಗಾರರಿಗೆ ವಿತರಿಸಲಾಗುವ ಸೀಮೆಎಣ್ಣೆ ಸಬ್ಸಿಡಿಯನ್ನು 50 ರೂ.ಗೆ ಹೆಚ್ಚಳ ಮಾಡುವ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಮತ್ಸ್ಯಾಶ್ರಯ ಮನೆಗಳನ್ನು ಮಂಜೂರು ಮಾಡುವ ಪ್ರಯತ್ನ ನಡೆಸಲಾಗುವುದು ಮತ್ತು ಮತ್ಸ್ಯಾಶ್ರಯ ಮನೆ ನಿರ್ಮಾಣಕ್ಕೆ ನೀಡಲಾಗುವ ಅನುದಾನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅನುದಾನ ಹೆಚ್ಚಳಕ್ಕೆ ಪ್ರಯತ್ನ ನಡೆಸಲಾಗುವುದು ಎಂದರು.

ಎಲ್ಲರ ಸಲಹೆ ಪಡೆದು ಹಂತ ಹಂತವಾಗಿ ಆದ್ಯತೆ ಮೇಲೆ ಮೂಲಭೂತ ಸೌಕರ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಅವರು ಭರವಸೆ ನೀಡಿದರು.

ಮರವಂತೆ ಹೊರಬಂದರು ಕಾಮಗಾರಿಯನ್ನು ತ್ವರಿತಗತಿಯನ್ನು ಪೂರ್ಣಗೊಳಿಸುವಂತೆ ಮರವಂತೆ ಹೊರ ಬಂದರು ಬಗ್ಗೆ ಯಾವುದೇ ದೂರು ಬಾರದ ರೀತಿಯಲ್ಲಿ ಕ್ರಮಕೈಗೊಳ್ಳಬೇಕು. ಗಂಗೊಳ್ಳಿ ಮೀನುಗಾರಿಕಾ ಬಂದರಿನ 2ನೇ ಹಂತದ ಕಾಮಗಾರಿ ಮತ್ತು ಉಪ್ಪುಂದ ಕೊಡೇರಿ ಬಂದರಿನ 3ನೇ ಹಂತದ ಕಾಮಗಾರಿಗೆ ಚಾಲನೆ ನೀಡ ಬೇಕು. ಅಳಿವೆಗದ್ದೆ ಬಂದರಿನ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಳ್ಳಬೇಕು. ಮೀನುಗಾರರ ಸೀಮೆಎಣ್ಣೆ ಸಮಸ್ಯೆ ಬಗ್ಗೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕು. ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಮತ್ಸ್ಯಾಶ್ರಮ ಮನೆ ವಿತರಿಸಬೇಕು ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮನವಿ ಮಾಡಿದರು.

ಇದೇ ಸಂದರ್ಭ ಮರವಂತೆ ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮರವಂತೆ ಹೊರಬಂದರು ಅಭಿವೃದ್ಧಿ ಹಾಗೂ ಮೀನುಗಾರರ ವಿವಿಧ ಬೇಡಿಕೆ ಯನ್ನೊಳಗೊಂಡ ಮನವಿಯನ್ನು ಸಚಿವರಿಗೆ ಸಲ್ಲಿಸಲಾಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಸರಕಾರದ ವಿಶೇಷಾಧಿಕಾರಿ ಚಿರಂಜೀವಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸನ್ನ ಶೇಟ್, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕುಮಾರಸ್ವಾಮಿ, ಸಹಾಯಕ ನಿರ್ದೇಶಕಿ ಆಶಾ, ಕೆಎಫ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಜಿಪಂನ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಮರವಂತೆ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ, ಮಾಜಿ ಅಧ್ಯಕ್ಷ ವಾಸುದೇವ ಖಾರ್ವಿ, ಚಂದ್ರ ಖಾರ್ವಿ, ಸ್ಥಳೀಯ ಮೀನುಗಾರ ಮುಖಂಡರು, ಕಾಂಗ್ರೆಸ್ ಪಕ್ಷದ ಮುಖಂಡರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor