ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್
ಉಡುಪಿ, ಸೆ.29: ಅಂಬೇಡ್ಕರ್ ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ ಎಂದರೆ ನಾವು ಎಂಬ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಅವರು ದೇಶದಲ್ಲಿದ್ದ ಮೌಢ್ಯ, ಜಾತಿ ಪದ್ದತಿ ಅಸ್ಪೃಶ್ಯತೆ ಹಾಗೂ ಅಸಮಾನತೆ ಅಂಧಕಾರವನ್ನು ಹೋಗಲಾಡಿಸಿ ಸಮಾನತೆಯನ್ನು ರೂಪಿಸಲು ಶ್ರಮಿಸಿದರು. ಅಂಬೇಡ್ಕರ್ ದೇಶದ ಸಂವಿಧಾನ ವನ್ನು ರಚಿಸುವ ಮೂಲಕ ದೇಶದಲ್ಲಿ ಸಮಾನತೆ ಮತ್ತು ಅಭಿವೃದ್ಧಿಗಾಗಿ ಭದ್ರ ಬುನಾದಿಯನ್ನು ಹಾಕಿದರು ಎಂದು ರಂಗ ತಜ್ಞ ಡಾ.ಶ್ರೀಪಾದ್ ಭಟ್ ಹೇಳಿದ್ದಾರೆ.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ನಡೆದ ಡಾ.ಬಿ. ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವದಲ್ಲಿ ಅವರು ಉಪನ್ಯಾಸ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್ ತಮ್ಮ ಬಾಲ್ಯದಿಂದಲೂ ಸಮಾಜದಲ್ಲಿ ಅನೇಕ ತಾರತಮ್ಯಗಳನ್ನು ಎದುರಿಸಿಕೊಂಡು ಬಂದಿದ್ದರು ಕೂಡ ತಮ್ಮ ಛಲದಿಂದಾಗಿ ಶಿಕ್ಷಣವನ್ನು ಪಡೆದ ಅವರು ಶಿಕ್ಷಣದ ಮೂಲಕ ದೇಶದಲ್ಲಿ ಅನೇಕ ಬದಲಾವಣೆಯನ್ನು ತಂದರು. ನೊಂದವರಿಗೆ ಬೆಳಕಾದ ಅಂಬೇಡ್ಕರ್ ಅವರ ಬದುಕು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಮೀದಾ ಬಾನು ಮಾತನಾಡಿ, ದೇಶದ ಅಭಿವೃದ್ಧಿಗಾಗಿ ಅಪಾರ ಕೊಡುಗೆಯನ್ನು ನೀಡಿದ ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ವಿದ್ಯಾರ್ಥಿಗಳು ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕಿ ರತ್ನಮಾಲ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮಾರುತಿ ವಂದಿಸಿದರು.