ಉಡುಪಿ : ಕಲ್ಲು ಒಡೆಯುವುದು ಪರಿಶಿಷ್ಟ ಜಾತಿಗೆ ಸೇರಿದ ಭೋವಿ ಯಾನೆ ವಡ್ಡರ ಕುಲಕಸುಬಾಗಿದ್ದು, ಸರಕಾರ ಅವರ ಮೂಲ ವೃತ್ತಿ ಕೈಗೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ 2 ಎಕರೆವರೆಗೆ ಕಲ್ಲು ಕೋರೆಗಳನ್ನು ನೀಡಲು ಅವಕಾಶ ಮಾಡಿಕೊಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೆ 21 ಜನ ಅರ್ಜಿ ಸಲ್ಲಿಸಿದ್ದು, ಕೇವಲ ಇಬ್ಬರು ಮಾತ್ರ ಇದರ ಲಾಭ ಪಡೆದುಕೊಂಡಿದ್ದಾರೆ. ಉಳಿದ ಅರ್ಜಿ ಸಲ್ಲಿಸಿದವರಿಗೆ ಅರಣ್ಯ ಹಾಗೂ ಕಂದಾಯ ಇಲಾಖೆ ಯಿಂದ ನಿರಪೇಕ್ಷಣಾ ಪತ್ರವನ್ನು ಪಡೆಯಲು ತಿಳಿಸಿದ್ದು, ಇವುಗಳನ್ನು ನೀಡಲು ವಿಳಂಬ ಉಂಟಾಗುತ್ತಿದೆ. ಗಣಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಅನುಸರಣೆ ಮಾಡಿ, ಮುಂದಿನ ಎರಡು ತಿಂಗಳ ಒಳಗೆ ನಿಯಮಾನುಸಾರ ಭೋವಿಗಳಿಗೆ ಕಲ್ಲುಕೋರೆಗಳನ್ನು ನೀಡಲು ಮುಂದಾಗಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಸಂಬಂಧಿತರಿಗೆ ಸೂಚನೆಗಳನ್ನು ನೀಡಿದ್ದಾರೆ.

ಕರ್ನಾಟಕ ಭೋವಿ (ವಡ್ಡರ) ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಿಗಮದಿಂದ ಅನುಷ್ಠಾನ ಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಮುದಾಯದ ಮುಖಂಡರೊಂದಿಗೆ, ಕಾರ್ಯಕರ್ತರೊಂದಿಗೆ ನಡೆದ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಭೋವಿ ಸಮಾಜದವರು ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದಾರೆ. ಇವರು ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಗುರುತಿನ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದಾಗ ಪರಿಶೀಲಿಸಿ ಪ್ರತಿಯೊಬ್ಬ ಅರ್ಹರಿಗೂ ಗುರುತಿನ ಚೀಟಿ ನೀಡಬೇಕೆಂದು ರಾಮಪ್ಪ ಸೂಚಿಸಿದರು.

ಸರಕಾರ ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಮುದಾಯದ ಕಟ್ಟಕಡೆಯ ವ್ಯಕ್ತಿಗಳಿಗೆ ಸಕಾಲದಲ್ಲಿ ತಲುಪುವಂತೆ ಮಾಡುವುದರೊಂದಿಗೆ ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು.

ರಾಜ್ಯ ಸರಕಾರ ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ದರೆ, ಭೋವಿ ಅಭಿವೃದ್ಧಿ ನಿಗಮವು ಭೋವಿ ಜನಾಂಗದ ಅಭಿವೃದ್ಧಿಗೆ ಪ್ರತ್ಯೇಕ 6 ಗ್ಯಾರಂಟಿ ಯೋಜನೆಗಳನ್ನು ಜಾರಿಗೋಳಿಸಿದೆ. ಈ ಎಲ್ಲಾ ಯೋಜನೆಗಳು ಪ್ರಾಮಾಣಿಕವಾಗಿ ಸಮಾಜದ ಅರ್ಹ ಬಡವರು, ನಿರ್ಗತಿಕರು ಸೇರಿ ದಂತೆ ಸಮಾಜದ ಕಟ್ಟಕಡೆಯ ಭೋವಿ ಸಮಾಜದ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳುವುದು ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳ ಕರ್ತವ್ಯವಾಗಿದೆ ಎಂದವರು ಹೇಳಿದರು.

ಎಸ್‌ಸಿ ಜಾತಿ ಪ್ರಮಾಣ ಪತ್ರ ನೀಡಿ

ರಾಜ್ಯದಲ್ಲಿ ಅತೀ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಭೋವಿ ಸಮಾಜಕ್ಕೆ ಅಗತ್ಯ ನೆರವು ದೊರಕಿ ಅವರ ಬೇಡಿಕೆಗಳು ಈಡೇರಬೇಕು. ಅತೀ ಕಡುಬಡ ಜನಾಂಗ ಕರಾವಳಿ ಜಿಲ್ಲೆಯಲ್ಲಿ ತಮ್ಮ ಜೀವನೋಪಾಯಕ್ಕಾಗಿ ಬೇರೆ ಬೇರೆ ಕಡೆಗಳಿಂದ ಬಂದು ನೆಲೆಸಿ ವಿವಿಧ ಕುಲಕಸುಬುಗಳಲ್ಲಿ ತೊಡಗಿಸಿ ಕೊಂಡಿದೆ. ಈ ಸಮಾಜವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಲು ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಅಗತ್ಯವಿದ್ದು, ಜಾತಿ ಪ್ರಮಾಣ ಪತ್ರ ಪಡೆಯಲು ಈ ಸಮುದಾಯ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದಾಗ ಕಂದಾಯ ಇಲಾಖೆಯ ಅಧಿಕಾರಿ ಗಳು ಮುತುವರ್ಜಿ ವಹಿಸಿ ಪರಿಶೀಲಿಸಿ, ಸಮನ್ವಯದೊಂದಿಗೆ ಅರ್ಹರಿಗೆ ಜಾತಿ ಪ್ರಮಾಣ ಪತ್ರ ದೊರಕಿಸಿ ಕೊಡಬೇಕು. ಒಂದೊಮ್ಮೆ ಅರ್ಜಿದಾರರನ್ನು ಪರಿಶೀಲನೆಗೆ ಕರೆದಾಗ ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದರು.

ಭೋವಿ ಸಮುದಾಯ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು ಎಂದು ಸಮಾಜದವರಿಗೆ ಕರೆ ನೀಡಿದ ರಾಮಪ್ಪ ಎಂ., ಸಮುದಾಯದ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಪ್ರತಿಷ್ಠಿತ ಶಾಲೆಗಳಲ್ಲಿ ಈ ಸಮುದಾಯದ ಮಕ್ಕಳು ಹೆಚ್ಚು ದಾಖಲು ಆಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದ ಅವರು ಯಾವುದೇ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವಾಗ ಜಾತಿ, ಉಪಜಾತಿ ಸೇರಿದಂತೆ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ನಂತರ ದಾಖಲು ಮಾಡಿಕೊಳ್ಳುವಂತೆ ಎಲ್ಲಾ ಶಿಕ್ಷಣ ಸಂಸ್ಥೆ ಗಳಿಗೂ ತಿಳಿಸಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಪೂರ್ ಮಾತನಾಡಿ, ಸರಕಾರವು ಭೋವಿ ಸಮಾಜ ಮುಂಚೂ ಣಿಗೆ ಬರುವ ನಿಟ್ಟಿನಲ್ಲಿ ಅವರಿಗೆ ಮೂಲಭೂತ ಸೌಕರ್ಯ, ಆರ್ಥಿಕ ಸಹಾಯ ನೀಡುವ ಜೊತೆಗೆ ಮಹಿಳಾ ಸಬಲೀಕ ರಣಕ್ಕೆ ವಿಶೇಷ ಆದ್ಯತೆ ನೀಡಿದೆ. ಮಹಿಳೆಯರ ಸ್ವಾವಲಂಭಿ ಜೀವನಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಲಾಭ ಸಮುದಾಯಕ್ಕೆ ಸಿಕ್ಕಿ ಅವರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.

ಕರಾವಳಿ ಜಿಲ್ಲೆಗಳಲ್ಲಿ ವಾಸವಿರುವ ಭೋವಿ ಸಮುದಾಯದ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ನಿಗಮದ ಅಧ್ಯಕ್ಷರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಗಫೂರ್ ತಿಳಿಸಿದರು.

ಕಂದಾಯ ಅಧಿಕಾರಿಗಳಿಂದ ಮೀನಾಮೇಷ: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಕಂದಾಯ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿ ದ್ದಾರೆ. ಪರಿಶಿಷ್ಟ ಜಾತಿ ಪ್ರಮಾಣ ಪತ್ರವು ವಿದ್ಯಾಭ್ಯಾಸ, ಉದ್ಯೋಗಕ್ಕೆ ಅತ್ಯವಶ್ಯಕವಾಗಿದ್ದು, ಕಂದಾಯ ಇಲಾಖೆಯ ಕಾರ್ಯದರ್ಶಿ ಗಳು ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಂಡು ಸಮುದಾಯದವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಾರ್ಕಳ ಶಾಸಕ ಸುನಿಲ್‌ಕುಮಾರ್ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಸರಕಾರದ ವತಿಯಿಂದ ಭೋವಿ ಸಮಾಜದ ಜನರ ಅಭಿವೃದ್ಧಿಗಾಗಿ ಜಾರಿಗೊಳಿಸಲಾದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಉಡುಪಿ ಹಾಗೂ ದಕ್ಷಿಣ ಕನ್ನಡ ಉಭಯ ಜಿಲ್ಲೆಗಳ ಸಮುದಾಯದ ಜನರ ಕುಂದು ಕೊರತೆ ಗಳು, ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುವ ತೊಂದರೆಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಿದ್ದು, ಅವರ ಸಮಸ್ಯೆಗಳಿಗೆ ಗರಿಷ್ಠ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳೋಣ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಜಿಲ್ಲೆಯಲ್ಲಿ ಭೋವಿ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ಸಮುದಾಯದ ಜನರಿಂದ ಬೇಡಿಕೆ ಇದ್ದು, ಭವನ ನಿರ್ಮಾಣ ಮಾಡಲು ಮಾನ ದಂಡಕ್ಕೆ ಅನುಗುಣವಾಗಿ ಸಿ.ಎ ಸೈಟ್‌ಗಳನ್ನು ನೀಡಲಾಗುವುದು ಎಂದು ಸಭೆಗೆ ಭರವಸೆ ನೀಡಿದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾ ನಾಯಕ್ ನಿಗಮದಿಂದ ಅನುಷ್ಠಾನ ಗೊಳಿಸಲಾಗಿರುವ ಯೋಜನೆಗಳ ಕುರಿತು ಹಾಗೂ ಭೋವಿ ಸಮುದಾಯದ ಜನರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಕರಾವಳಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರವಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೊಳ್ಳಿ, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೇಮಲತಾ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ ಮುಲ್ಲಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ತಹಶೀಲ್ದಾರ್‌ಗಳು, ಭೋವಿ ಸಮಾಜದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ ವಂದಿಸಿದರು.



 


 




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor