ಉಡುಪಿ, ಅ.13: ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳ ಮೀಸಲಾತಿ ಪ್ರಕಟಗೊಂಡಿದ್ದು, ಚುನಾವಣಾ ಅಖಾಡ ಸಿದ್ದಗೊಂಡಿದೆ. ಈಗಾಗಲೇ ಘೋಷಣೆಯಾಗಿರುವ ಮೀಸಲಾತಿಯಡಿ, ಪಕ್ಷದ ಅಭ್ಯರ್ಥಿಗಳನ್ನು ಭರ್ಜರಿ ಬಹುಮತದಿಂದ ಗೆಲ್ಲಿಸುವ ಮೂಲಕ ಮಗದೊಮ್ಮೆ ಜಿ.ಪಂ. ಸಹಿತ ಗರಿಷ್ಠ ತಾಪಂ ಮತ್ತು ಗ್ರಾಪಂಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ಶ್ರಮಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಮುಂದಿನ 10 ದಿನಗಳಲ್ಲಿ ಎಲ್ಲಾ 28 ಜಿಪಂ ಕ್ಷೇತ್ರಗಳ ಸಹಿತ ಪ್ರತೀ ಗ್ರಾಪಂ ವ್ಯಾಪ್ತಿಯ ಕಾರ್ಯ ಕರ್ತರ ಸಭೆ ಗಳನ್ನು ಆಯೋಜಿಸಿ ಚುನಾವಣಾ ಪೂರ್ವ ಸಿದ್ಧತೆಗಳನ್ನು ನಡೆಸಬೇಕು. ಸಂಘಟಿತ ಪರಿಶ್ರಮದ ಮೂಲಕ ಗೆಲುವಿನ ರೂವಾರಿಗಳಾಗಿ ಸಾರ್ಥಕ ಸೇವೆ ಸಲ್ಲಿಸಬೇಕು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರ ಮತ್ತು ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು. ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಗೀತೆ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor