ಉಡುಪಿ, ಅ.21: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ನ. 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ವಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯ ಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಅಜ್ಜರಕಾಡು ಕ್ರೀಡಾಂಗಣ ದವರೆಗೆ ಕನ್ನಡತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಇದರೊಂದಿಗೆ ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಯೋಜನೆ ಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.

ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕ, ಎನ್ನೆಸ್ಸೆಸ್, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ಪಥ ಸಂಚಲನಕ್ಕೆ ಅಗತ್ಯವಿರುವ ಪೂರ್ವ ತಯಾರಿಗಳನ್ನು ನಡೆಸುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿದ್ದು, ಇದಕ್ಕೂ ಸಹ ಸಿದ್ಧತೆ ನಡೆಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor