ಉಡುಪಿ : ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಸಹಪಠ್ಯ ಚಟುವಟಿಕೆ ಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲಿನಿಂದ ಪಾಠ ಕಲಿತು, ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕ ಸತೀಶ್ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿ ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಭಾವಗೀತೆ ಮತ್ತು ಇಂಗ್ಲಿಷ್ ಚರ್ಚಾ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜೀವನದಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಗೆಲುವು ಸಾಧಿಸಿದಾಗ ಸಂತೋಷಪಡುವಂತೆ, ಸೋಲನ್ನೂ ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವ ಜೊತೆಗೆ, ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆ. ಪ್ರತಿಯೊಬ್ಬ ವಿದ್ಯಾ ರ್ಥಿಯೂ ತನ್ನಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಅದನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಫಲಿತಾಂಶವಲ್ಲ. ಪ್ರತಿಯೊಂದು ಸ್ಪರ್ಧೆಯೂ ಹೊಸ ಅನುಭವ ಹಾಗೂ ಕಲಿಕೆಗೆ ಅವಕಾಶ ಒದಗಿಸುತ್ತದೆ. ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ, ನಾಯಕತ್ವ ಗುಣ, ಸಮಯ ಪ್ರಜ್ಞೆ, ಶಿಸ್ತು ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕಿ ಡಾ. ಉಷಾ, ಆಂಗ್ಲ ಭಾಷಾ ಉಪನ್ಯಾಸಕರಾದ ಗಂಗಾಧರ್ ವಿ.ಎ., ಶುಭಗೀತ, ಸ್ವಾತಿ, ಕಾಲೇಜಿನ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷೆ ಮಲ್ಲಿಕಾ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾ ಯಿನಿ ಇಂದಿರಾ, ಕಾಲೇಜಿನ ವಿದ್ಯಾರ್ಥಿ ನಾಯಕಿ ಗ್ರೀಷ್ಮ, ಎನ್ನೆಸ್ಸೆಸ್ ನಾಯಕಿ ವಿಜೇತಾ ಉಪಸ್ಥಿತರಿದ್ದರು.

ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ಗಣಿತಶಾಸ್ತ್ರ ಉಪನ್ಯಾಸಕಿ ಸುಧಾ ಹೆಗಡೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor