ಉಡುಪಿ, ನ.21: ಗ್ರಂಥಾಲಯಗಳು ಜ್ಞಾನದ ಭಂಡಾರಗಳಿದ್ದಂತೆ. ಪ್ರಪಂಚದ ಎಲ್ಲ ಭಾಷೆಗಳ ಪುಸ್ತಕಗಳು ನಮಗೆ ಗ್ರಂಥಾಲಯದಲ್ಲಿ ದೊರೆಯುತ್ತವೆ. ಪುಸ್ತಕ ಓದುವುದರಿಂದ ನಮ್ಮ ಜ್ಞಾನ ಹೆಚ್ಚುತ್ತದೆ ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದ್ದಾರೆ.
ಶುಕ್ರವಾರ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಉಡುಪಿ ಇದರ ಆಶ್ರಯದಲ್ಲಿ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2026 ಅಂಗವಾಗಿ ಉತ್ತಮ ಓದುಗ/ ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಲಿಕೆ ಒಂದು ನಿರಂತರ ಪ್ರಕ್ರಿಯೆ. 30 ಕೋಟಿ ಯುವಕರನ್ನು ಹೊಂದಿದ ನಮ್ಮ ಭಾರತ ಯುವ ದೇಶ. ಬಹಳಷ್ಟು ವಿದ್ಯಾರ್ಥಿಗಳು ಸಾರ್ವಜನಿಕ ಗ್ರಂಥಾಲಯಗಳಲ್ಲಿ ದೊರೆಯುವ ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆದು ಉನ್ನತ ಅಧಿಕಾರಿಗಳಾಗುತ್ತಾರೆ. ಇಂದು ದೇಶದ ಮೂಲೆ ಮೂಲೆಯಲ್ಲಿ ಸಾರ್ವಜನಿಕ ಗ್ರಂಥಾಲಯಗಳಿವೆ ಎಂದರು.
ಉತ್ತಮ ಓದುಗ ಪುರಸ್ಕಾರಕ್ಕೆ ಭಾಜನರಾದ ಗಣೇಶ್ ಬಿ ಹೆಗ್ಡೆ ಹಾಗೂ ಜಯಲಕ್ಷ್ಮಿ ಬಿ. ಮತ್ತು ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರಕ್ಕೆ ಭಾಜನರಾದ ಪುಷ್ಪ, ನಳಿನಾಕ್ಷಿ, ಸಾಧನಾ ಹಾಗೂ ಅನಿತಾ ಅವರನ್ನು ಸನ್ಮಾನಿಸಲಾಯಿತು.
ಸೈಬರ್ ಕ್ರೈಂ ಪೊಲೀಸ್ ಠಾಣೆಯ ನೀಲೇಶ್, ಸೈಬರ್ ಸುರಕ್ಷತಾ ಜಾಗೃತಿ ಕುರಿತು ವಿಶೇಷ ಉಪನ್ಯಾಸ ನೀಡಿ ದರು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾುತು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ್ ಕಾಮತ್ ಹಾಗೂ ಇತರರು ಉಪಸ್ಥಿತರಿದ್ದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ರಂಜಿತಾ ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ವಿನುತಾ ಬಿ. ಸ್ವಾಗತಿಸಿ, ಗ್ರಂಥಾಲಯ ಸಹಾಯಕಿ ಶ್ಯಾಮಲಾ ವಂದಿಸಿದರು. ಪ್ರೇಮ ಕಾರ್ಯಕ್ರಮ ನಿರೂಪಿಸಿದರು.