ಕಾರ್ಕಳ: ಸಚಿವ ರಿಝ್ವಾನ್ರಿಂದ ನೂತನ ಸಭಾಭವನ ಉದ್ಘಾಟನೆ
ಉಡುಪಿ, ನ.25: ನಮ್ಮ ಸರಕಾರ ಜನರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಇದರ ಜೊತೆಯಲ್ಲಿ ಇನ್ನೂ ಅನೇಕ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.
ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿ ಸಲಾದ ನೂತನ ಸಭಾಭವನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸರಕಾರ ಈ ವಾರ್ಡಿನ ಜನರ ಅನುಕೂಲಕ್ಕಾಗಿ ನಗರೋತ್ಥಾನ ಯೋಜನೆಯಡಿ ನೂತನ ಸಭಾಭವನವನ್ನು ನಿರ್ಮಿಸಿದೆ. ಸ್ಥಳೀಯ ಜನರು ತಮ್ಮ ಕುಟುಂಬದ ಮದುವೆ ಸೇರಿದಂತೆ ಯಾವುದೇ ಸಭೆ, ಸಮಾರಂಭಗಳನ್ನು ಮಿತವ್ಯಯದಲ್ಲಿ ನಡೆಸಲು ಇದರಿಂದ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಈ ಭಾಗದ ಜನರ ಅನುಕೂಲಕ್ಕಾಗಿ ಸರಕಾರ ನಗರೋತ್ಥಾನ ಯೋಜನೆ ಯಡಿ ನಿರ್ಮಿಸಿರುವ ನೂತನ ಸಭಾ ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಇದರ ನಿರ್ವಹಣೆಯನ್ನು ಸಮರ್ಪಕವಾಗಿ ಸ್ವಚ್ಛತೆ ಯೊಂದಿಗೆ ಮಾಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಪುರಸಭೆ ಸದಸ್ಯೆ ಪ್ರತಿಮಾ ರಾಣೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.