×
Ad

ಕೋಟ: ಫೆ.10ರ ʼಹೊಳಪು-2024ʼ ಕ್ರೀಡೋತ್ಸವಕ್ಕೆ ಪ್ರಿಯಾಂಕ ಖರ್ಗೆ ಚಾಲನೆ

Update: 2024-02-07 20:29 IST

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರ ಸಹಯೋಗದೊಂದಿಗೆ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸುವ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ‘ಹೊಳಪು-2024’ ಫೆ.10ರ ಶನಿವಾರ ಕೋಟದ ವಿವೇಕ ಹೈಸ್ಕೂಲಿನ ಆವರಣದಲ್ಲಿ ನಡೆಯಲಿದೆ.

ಹೊಳಪು-2024 ಫೆ.10ರಂದು ಬೆಳಗ್ಗೆ 8:30ರಿಂದ ಸಂಜೆಯವರೆಗೆ ವಿವಿಧ ಸ್ಪರ್ಧೆಗಳೊಂದಿಗೆ ನಡೆಯಲಿದೆ. ಗ್ರಾಮ ಸ್ವರಾಜ್ಯದ ಕಲ್ಪನೆಯೊಂದಿಗೆ ನಡೆಯುವ ಈ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪಧಾ ಕಾರ್ಯಕ್ರಮವನ್ನು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಉದ್ಘಾಟಿಸುವರು. ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಸಾಂಸ್ಕೃತಿಕ ಉತ್ಸವಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಪಥ ಸಂಚಲನಕ್ಕೆ ಚಾಲನೆ ನೀಡುವರು. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಗೌರವ ಸ್ವೀಕಾರ ಮಾಡಲಿದ್ದಾರೆ.

ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳ ಅತ್ಯುತ್ತಮ ಗ್ರಾಪಂ ಗಳಿಗೆ ವಿಧಾನಪರಿಷತ್‌ನ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ನೀಡಿ ಪುರಸ್ಕರಿಸಲಿದ್ದಾರೆ.ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಕ್ರೀಡಾ ಜ್ಯೋತಿ ಬೆಳಗಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಸಂಸದ ನಳಿನ್‌ಕುಮಾರ್ ಕಟೀಲ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರೂ ಭಾಗವಹಿಸಲಿದ್ದಾರೆ.

ಉಭಯ ಜಿಲ್ಲೆಗಳ ಸಾವಿರಕ್ಕೂ ಅಧಿಕ ಜನಪ್ರತಿನಿಧಿಗಳು 100ಮೀ, 200ಮೀ, ರಿಂಗ್ ಇನ್ ದಿ ವಿಕೆಟ್, ಮಡಿಕೆ ಒಡೆಯುವುದು, ಗುಂಡು ಎಸೆತ ಮುಂತಾದ ಕ್ರೀಡಾಸ್ಪರ್ಧೆ, ಹಗ್ಗ-ಜಗ್ಗಾಟ, ತ್ರೋಬಾಲ್ ಅಲ್ಲದೇ ಸೂಪನ್ ಮಿನಿಟ್, ಗಾಯನ, ಛದ್ಮವೇಷದಂಥ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News