×
Ad

ಕರಾವಳಿ ಜಿಲ್ಲೆಗಳಿಗೆ ಜೂ.11ರವರೆಗೆ ಆರೆಂಜ್ ಅಲರ್ಟ್

Update: 2026-06-04 21:20 IST

ಉಡುಪಿ, ಜೂ.4: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ - ಜೂ.5ರಿಂದ 11ರವರೆಗೆ - ಕಾಲ ಆರೆಂಜ್ ಅಲರ್ಟ್‌ನ ಮುನ್ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕೆಲವು ಸೂಚನೆಗಳನ್ನು ನೀಡಿದೆ.

*ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ,ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೇ ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ-ಸಿಡಿಲಿನ ಸಂದರ್ಭದಲ್ಲಿ ಕೃಷಿ ಚಟುವಟಿಕೆ ಗಳಲ್ಲಿ ತೊಡಗಬಾರದು. ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ, ನೀರಿರುವ ಪ್ರದೇಶ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

*ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್‌ಕಂಬದ ಬಳಿ ಹೋಗಬಾರದು. ತುಂಡಾದ ವಿದ್ಯುತ್ ತಂತಿಯಿಂದ ದೂರವಿರಬೇಕು. ಅದೇ ರೀತಿ ದುರ್ಬಲವಾದ ಹಳೆಯ ಕಟ್ಟಡ, ಮರಗಳ ಬಳಿ, ಕೆಳಗೆ ನಿಲ್ಲಬಾರದು.

*ಭಾರೀ ಮಳೆ ಸುರಿಯುವ ಸಂಭವವಿರುವುದರಿಂದ ಕೆಲವು ಕಡೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಜಾಗೃತೆ ವಹಿಸಬೇಕು. ಇಂತಹ ಪ್ರದೇಶಗಳ ಜನತೆ ತಹಶೀಲ್ದಾರ್ ಅಥವಾ ಗ್ರಾಪಂ ಕಚೇರಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಳ್ಳಬಹುದು.

*ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್‌ಗೆ ಅಥವಾ ಆಯಾ ತಾಲೂಕು ತಹಶೀಲ್ದಾರ್ ಕಚೇರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು.

*ತುರ್ತು ಸೇವೆಗೆ ಶುಲ್ಕ ರಹಿತ 1077 ಅಥವಾ ಕಂಟ್ರೋಲ್ ರೂಮ್‌ನ 0820-2574802 ಅಥವಾ ಆಯಾ ತಾಲೂಕು ಕೇಂದ್ರಗಳ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಗುರುವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 6.9ಮಿ.ಮೀ. ಮಳೆಯಾಗಿದೆ. ಕುಂದಾಪುರದಲ್ಲಿ 9.3, ಕಾಪು 8.1, ಕಾರ್ಕಳ 7.1, ಹೆಬ್ರಿ 6.9, ಉಡುಪಿ 5.9, ಬ್ರಹ್ಮಾವರ 5.8 ಹಾಗೂ ಬೈಂದೂರು 3.6ಮಿ.ಮೀ. ಮಳೆಯಾದ ವರದಿ ಬಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News