ಉಡುಪಿ: ಜು.14ರಂದು ಕೆಎಸ್ಸಾರ್ಟಿಸಿ ಶಕ್ತಿ ಯೋಜನೆಯ ಸಂಭ್ರಮಾಚರಣೆ
ಉಡುಪಿ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್‌ಗಳ ಮೂಲಕ ರಾಜ್ಯಾದ್ಯಂತ ಉಚಿತವಾಗಿ ಸಂಚರಿಸುವ ‘ಶಕ್ತಿ ಯೋಜನೆ’ಯಲ್ಲಿ ಫಲಾನುಭವಿ ಪ್ರಯಾಣಿಕರ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿದ್ದು, ಇದರ ಸಂಭ್ರಮಾಚರಣೆ ಜು.14ರಂದು ನಗರದ ಬನ್ನಂಜೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ತಿಳಿಸಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯನ್ನು ರಾಜ್ಯ ಸರಕಾರ ಮೊಟ್ಟ ಮೊದಲಿಗೆ ಜಾರಿಗೊಳಿ ಸಿತ್ತು. ಶಕ್ತಿ ಯೋಜನೆಯನ್ನು 2023ರ ಜೂನ್ 11ರಂದು ಜಾರಿಗೊಳಿಸುವ ಮೂಲಕ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ರಾಜ್ಯರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿತ್ತು.
ಈ ಶಕ್ತಿ ಯೋಜನೆಯ ಫಲಾನುಭವಿಗಳ ಪ್ರಯಾಣದ ಸಂಖ್ಯೆ ಈಗ 500 ಕೋಟಿ ಗಡಿಯನ್ನು ದಾಟಿದೆ. ಇದೊಂದು ಸಂಭ್ರಮದ ಸಂಗತಿಯಾಗಿದ್ದು, ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವ ದೇಶದ ಏಕೈಕ ಸರಕಾರ ಕರ್ನಾಟಕದ್ದಾಗಿದೆ ಎಂದು ಹೇಳಿಕೆ ತಿಳಿಸಿದೆ.
ಶಕ್ತಿ ಯೋಜನೆಯಡಿ ನಾಡಿನ ಹೆಣ್ಣು ಮಕ್ಕಳು ರಾಜ್ಯದ ಸರಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಸಮಿತಿ ಆಚರಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಫಲಾನುಭವಿ ಗಳು ಪ್ರಯಾಣ ಮಾಡಿರುವುದರ ಸಂಕೇತವಾಗಿ ಜು.14ರಂದು ಸೋಮವಾರ ಬೆಳಗ್ಗೆ 9:00 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಹಾಗೂ ತಾಲೂಕುಗಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಮಿತಿಯ ಸದಸ್ಯರು ಒಂದು ಬಸ್ಸಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಗುಲಾಬಿ ಹೂವು ಹಾಗೂ ಸಿಹಿ ಹಂಚುವುದರೊಂದಿಗೆ ಆಚರಿಸಲಿದ್ದಾರೆ.
ಅದರಂತೆ ಉಡುಪಿ ಜಿಲ್ಲೆಯ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಉಡುಪಿ ಬನ್ನಂಜೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಪೂಜೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸ ಲಾಗುವುದು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ವಿವಿಧ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಅಶೋಕ್‌ಕುಮಾರ್ ಕೊಡವೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.