ಮಳೆನೀರು ಕೊಯ್ಲು: ಮಾ.2ಕ್ಕೆ ಜಿಲ್ಲಾ ಮಟ್ಟದ ಕಾರ್ಯಾಗಾರ: ಉಡುಪಿ ಡಿಸಿ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿಯುತಿದ್ದು, ಇದರಿಂದ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ಮಳೆ ನೀರಿನ ಕೊಯ್ಲು ಕುರಿತು ಜಾಗೃತಿ ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಮಾರ್ಚ್ 2ರಂದು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆ ನೀರು ಕೊಯ್ಲು ಕಾರ್ಯಾಗಾರದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಅವರು ಮಾತನಾಡುತ್ತಿದ್ದರು.
ಮಳೆ ನೀರು ಕೊಯ್ಲು ಸಂಬಂಧ ಸಾರ್ವಜನಿಕರಲ್ಲಿ ಹಾಗೂ ರೈತರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 2ರಂದು ಜಿಲ್ಲಾಧಿಕಾರಿ ಕಚೇರಿಯ ಅಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಲಿದ್ದು, ಕಾರ್ಯಾಗಾರದಲ್ಲಿ ಸಿವಿಲ್ ಇಂಜಿನಿಯರ್ ಅಸೋಸಿ ಯೇಶನ್, ಗುತ್ತಿಗೆ ನಿರ್ಮಾಣ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆಸಕ್ತ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದವರು ನುಡಿದರು.
ಜಿಲ್ಲೆಯಲ್ಲಿ ದಿನೇದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಮಳೆ ನೀರಿನ ಕೊಯ್ಲು ಪದ್ಧತಿ ಅನುಸರಿಸುವುದರಿಂದ ನದಿಯ ನೀರಿನ ಮಟ್ಟ ಹೆಚ್ಚುವುದರೊಂದಿಗೆ ಕೆರೆ, ನದಿಗಳಲ್ಲಿ ನೀರು ಶೇಖರಣೆಯಾಗುತ್ತದೆ. ನಗರಸಭೆ ವ್ಯಾಪ್ತಿಯಲ್ಲಿ ಮನೆ ನಿರ್ಮಾಣದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳು ಕಟ್ಟಡ ಪರವಾನಿಗೆ ನೀಡುವಾಗ ಕಡ್ಡಾಯವಾಗಿ ಮಳೆ ನೀರಿನ ಕೊಯ್ಲು ಅಳವಡಿಸಲು ಸೂಚನೆ ನೀಡಬೇಕು ಎಂದರು.
ಮಳೆ ನೀರು ಕೊಯ್ಲು ಪದ್ಧತಿಯನ್ನು ಗ್ರಾಮೀಣ ಹಾಗೂ ನಗರ ಪ್ರದೇಶ ಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡ ಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತಾಲೂಕು ಹಾಗೂ ಗ್ರಾಮ ಮಟ್ಟಗಳಲ್ಲಿ ಕಾರ್ಯ ಗಾರವನ್ನು ಏರ್ಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ನೀರನ್ನು ಆದಷ್ಟು ಮಿತವಾಗಿ ಬಳಸಬೇಕು. ರೈತರುಗಳು ಜಮೀನುಗಳಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ನೀರಿನ ಸಂರಕ್ಷಣೆಗೆ ಮುಂದಾಗಬೇಕು ಎಂದ ಜಿಲ್ಲಾಧಿಕಾರಿಗಳು, ಕಾರ್ಯಾಗಾರದ ಸಂದರ್ಭದಲ್ಲಿ ಇಲಾಖೆಗಳ ಯೋಜನೆ ಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಅವರನ್ನು ಯೋಜನೆಯ ಫಲಾನುಭವಿಗಳನ್ನಾಗಿ ಮಾಡಬೇಕು ಎಂದರು.
ಮಳೆ ನೀರು ಕೊಯ್ಲು ತಜ್ಞ ಜೋಸೆಫ್ ರೆಬೆಲ್ಲೋ ಕಾರ್ಯಗಾರ ಏರ್ಪಡಿಸುವ ಕುರಿತು ಅಗತ್ಯ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಕೃಷಿ ಇಲಾಖೆ ಅಧಿಕಾರಿ ಚಂದ್ರಶೇಖರ್, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.