×
Ad

ಉಡುಪಿ: ಆ.20ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ

ವಸತಿ ನಿಲಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Update: 2025-08-11 19:22 IST

ಉಡುಪಿ, ಆ.11:ಹಿಂದುಳಿದ ವರ್ಗಗಳ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸಲು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮ ಆ.20ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡಿನ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದ ವೇದಿಕೆಯಲ್ಲಿ ನಡೆಯಲಿದೆ. ಡಿ.ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಯ ಕುರಿತಂತೆ ಅವರಿಗಿದ್ದ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜನಪರ ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದ ಅರಸು ಜೀವನ ಸಾಧನೆ, ವ್ಯಕ್ತಿತ್ವ ಮತ್ತು ಕೊಡುಗೆಯ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ವಿದ್ಯಾರ್ಥಿ ಗಳಿಗೆ ಪ್ರಬಂಧ, ಭಾಷಣ ಸೇರಿದಂತೆ ವಿವಿಧ ಸ್ಫರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಗುವುದು ಎಂದರು.

2024-25ನೇ ಸಾಲಿನಲ್ಲಿ ಎಸೆಸೆಲ್ಸಿ, ಪಿಯುಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ನಗದು ಬಹುಮಾನ ನೀಡಿ, ಸನ್ಮಾನಿಸಲಾಗುವುದು.ತಾಲೂಕು ಮಟ್ಟದಲ್ಲಿಯೂ ಸಹ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ವ್ಯವಸ್ಥಿತ ವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಎಎಸ್‌ಪಿ ಸುಧಾಕರ ನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿ ಗಳು, ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News