ಕುಡಿಯುವ ನೀರಿನ ಸಮಸ್ಯೆಗಳನ್ನು 24 ಗಂಟೆಯೊಳಗೆ ಬಗೆಹರಿಸಿ: ಅಧಿಕಾರಿಗಳಿಗೆ ಉಡುಪಿ ಡಿಸಿ ಸೂಚನೆ

Update: 2024-04-30 14:35 GMT

ಉಡುಪಿ, ಎ.30: ಜಿಲ್ಲೆಯ ಯಾವುದೇ ಭಾಗದಿಂದ ಯಾರೇ ಆದರೂ ದೂರವಾಣಿ ಮೂಲಕ ನೀರಿನ ಸಮಸ್ಯೆಯ ಕುರಿತು ಮಾಹಿತಿ ನೀಡಿದರೆ 24 ಗಂಟೆಯ ಒಳಗಾಗಿ ಅದನ್ನು ಬಗೆಹರಿಸಬೇಕು. ಇದೇ ರೀತಿ ಜಿಲ್ಲೆಯಲ್ಲಿ ಮಳೆ ಬರುವವರೆಗೂ ನೀರಿನ ಸಮಸ್ಯೆಗೆ ಸ್ಪಂದಿಸಲು ಎಲ್ಲಾ ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ ನೀರಿನ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ನೀರಿನ ಯಾವುದೇ ತೊಂದರೆ ಉಂಟಾಗದಂತೆ ನೋಡಿ ಕೊಳ್ಳಬೇಕು ಎಂದರು.

ಜಾನುವಾರುಗಳಿಗೆ ಮೇವಿನ ಕೊರತೆ ಜಿಲ್ಲೆಯಲ್ಲಿ ಇದುವರೆಗೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ 2.20 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿದ್ದು, ಮುಂದಿನ 14 ವಾರಗಳಿಗೆ ಸಾಕಾಗುವಷ್ಟು ಮೇವುಗಳ ಲಭ್ಯತೆ ಇದೆ. ರೈತರು ತಮ್ಮ ಜಾನುವಾರುಗಳಿಗೆ ಮೇವಿನ ಅಭಾವವಾದಲ್ಲಿ ಜಿಲ್ಲೆಯ ಗೋಶಾಲೆಗಳಿಗೆ ದನ-ಕರುಗಳನ್ನು ಬಿಡಬಹುದು ಎಂದ ಅವರು, ಮೇವಿನ ಕೊರತೆ ಉಂಟಾದ ರೈತರುಗಳಿಗೆ ಸರಕಾರಿ ದರದಲ್ಲಿ ಮೇವು ನೀಡಲಾಗುವುದು ಎಂದು ತಿಳಿಸಿದರು.

ಹಾಲು ಉತ್ಪಾದಕರ ಒಕ್ಕೂಟದ ಮೂಲಕವೂ ಮೇವಿನ ಮಿನಿಕಿಟ್‌ಗಳನ್ನು ರೈತರಿಗೆ ವಿತರಿಸಲಾಗುತ್ತಿದೆ. ಒಟ್ಟ 979.5 ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಲಾಗಿದ್ದು, ಸುಮಾರು 9795 ಮೆಟ್ರಿಕ್ ಟನ್‌ನಷ್ಟು ಉತ್ಪಾದನೆ ಮಾಡಲಾಗಿದೆ. ಇವುಗಳ ಜೊತೆಯಲ್ಲಿ ಪಶು ಆಹಾರಗಳನ್ನು ಸಹ ರೈತರಿಗೆ ಒದಗಿಸಲಾಗಿದೆ ಎಂದರು.

ಗಾಳಿ-ಮಳೆಯಿಂದ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ತುಂಡಾದಲ್ಲಿ ಕೂಡಲೇ ಅವುಗಳನ್ನು ಬದಲಾಯಿಸಲು ಸಿದ್ಧರಾಗಿರಬೇಕು. ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಗಳನ್ನು ನೀಡಿದರು.

ರಸ್ತೆ ಬದಿಯಲ್ಲಿರುವ ಅಪಾಯಕಾರಿಯಾಗಿರುವ ಹಾಗೂ ವಿದ್ಯುತ್ ಲೈನ್ ಗಳಿಗೆ ತೊಂದರೆ ಉಂಟುಮಾಡುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಡಾ.ವಿದ್ಯಾಕುಮಾರಿ ಸೂಚನೆ ನೀಡಿದರು.

ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ತೋಡು ಹಾಗೂ ಚರಂಡಿಗಳಲ್ಲಿರುವ ಹೂಳು, ತರಗೆಲೆ, ಕಸ-ಕಡ್ಡಿಗಳನ್ನು ತೆರವು ಗೊಳಿಸಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗದಂತೆ ಈಗಲೇ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಮೇ 7ರವರೆಗೆ ಹೀಟ್‌ವೇವ್: ಕರಾವಳಿಯಲ್ಲಿ ಮೇ 7ರವರೆಗೆ ಹೀಟ್‌ವೇವ್ (ಬಿಸಿಗಾಳಿ) ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜೊತೆಗೆ ಅಪರಾಹ್ನ 12ರಿಂದ 3ಗಂಟೆಯವರೆಗೆ ಸಾಧ್ಯವಾದಷ್ಟು ಹೊರಗಡೆ ಓಡಾಡುವುದನ್ನು ತಪ್ಪಿಸಬೇಕು. ಸಾಕಷ್ಟು ನೀರನ್ನು ಕುಡಿಯುತ್ತಿರಬೇಕು. ಸಾಕು ಪ್ರಾಣಿಗಳಿಗೆ ಸಹ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಬಿಸಿಗಾಳಿಗೆ ತುತ್ತಾಗಿ ಆರೋಗ್ಯದಲ್ಲಿ ವ್ಯತ್ಯಾಸ ವಾದ ವ್ಯಕ್ತಿಯು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆಯುವಂತೆ ನೋಡಿಕೊಳ್ಳಬೇಕು ಎಂದರು.

ತಾಲೂಕು ಮಟ್ಟದಲ್ಲಿ ರಚಿಸಲಾದ ಟಾಸ್ಕ್‌ಫೋರ್ಸ್ ಸಮಿತಿಗಳು ನಿರಂತರವಾಗಿ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದಲ್ಲಿ, ಸರಬರಾಜು ಮಾಡಿದ ಹದಿನೈದು ದಿನಗಳ ಒಳಗೆ ಹಣ ಪಾವತಿ ಮಾಡಬೇಕು. ಪಾವತಿಗೂ ಮುನ್ನ ಸರಕಾರದ ಕಾರ್ಯಸೂಚಿಯನ್ವಯ ನಿಗದಿತ ನಮೂನೆಯ ದಾಖಲೆಗಳನ್ನು ಒದಗಿಸಿ, ಅನುಮೋದನೆ ಪಡೆದುಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ. ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್‌ಗಳ ಇಓಗಳು ಹಾಗೂ ಇತರರು ಉಪಸ್ಥಿತರಿದ್ದರು.

ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು

ಜಿಲ್ಲೆಯ ಗ್ರಾಮೀಣ ಭಾಗದ ಕೆಲವು ಗ್ರಾಮಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಪ್ರಾರಂಭಗೊಂಡಿದೆ. ಅಲ್ಲಿ ಟ್ಯಾಂಕರ್ ಮೂಲಕ ನೀರು ನೀಡಲು ವ್ಯವಸ್ಥೆ ಮಾಡಲಾಗಿದೆ. ನೀರೆ, ಪೆರ್ಡೂರು, ಮುದ್ರಾಡಿ, ಬೆಳ್ವೆ, ಉಪ್ಪುಂದ ಗ್ರಾಮಗಳ ಕೆಲವು ಪ್ರದೇಶಗಳಲ್ಲಿ ಸಹ ನೀರಿನ ಸಮಸ್ಯೆ ವರದಿಯಾಗಿದೆ ಎಂದರು.

ನೀರಿನ ಸಮಸ್ಯೆ ಇರುವಲ್ಲಿ ಎಸ್‌ಎಲ್‌ಆರ್‌ಎಮ್ ವಾಹನಗಳಲ್ಲಿ ಸಿಂಟ್ಯಾಕ್ಸ್‌ಗಳನ್ನುಅಳವಡಿಸಿಕೊಂಡು ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ವ್ಯತ್ಯಯವಾಗದಂತೆ ಜಾಗೃತೆ ವಹಿಸಬೇಕು ಎಂದೂ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಖಾತೆಯಲ್ಲಿ 16.94 ಕೋಟಿ ರೂ.

ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 16.94 ಕೋಟಿ ರೂ. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 2.21 ಕೋಟಿ ಹಾಗೂ ಜಿಲ್ಲೆಯ ಬರ ಪ್ರದೇಶ ಎಂದು ಘೋಷಿಸಿದ ಮೂರು ತಾಲೂಕುಗಳ ಬರ ನಿರ್ವಹಣೆಗೆ 4.5 ಕೋಟಿ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಯಾವುದೇ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.






Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News