ಉಡುಪಿ ಜಿಲ್ಲೆಯ 2,72,477 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

ಆ.10ರಂದು ರಾ.ಜಂತುಹುಳ ನಿವಾರಣಾ ದಿನ

Update: 2026-08-08 20:21 IST

ಉಡುಪಿ, ಆ.8: 1ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ ಇದರ ನಿವಾರಣೆಗಾಗಿ ಆಗಸ್ಟ್ 10ರಂದು ರಾಷ್ಟೀಯ ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತಿದ್ದು, ಅಂದು ಜಿಲ್ಲೆಯ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಆಲ್ಬೆಂಡಝೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು.

ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ ಒಟ್ಟು 2,72,477 ಮಕ್ಕಳನ್ನು ಗುರುತಿಸಲಾಗಿದ್ದು, ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯ ಕರ್ತೆಯರ ಉಪಸ್ಥಿತಿಯಲ್ಲಿ ನೀಡಲಾಗುವುದು. ಶಿಕ್ಷಕರು, ಬಿಸಿಯೂಟ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಹ ಈ ಮಾತ್ರೆಯನ್ನು ನೀಡಲಾಗುತ್ತದೆ.

ಹೊಟ್ಟೆ ಹುಳಗಳ ತೊಂದರೆಯಿಂದ ರಕ್ತಹೀನತೆ, ಪೌಷ್ಠಿಕಾಹಾರದ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿ ಕೊಳ್ಳಬಹುದು.ಆಲ್ಬೆಂಡಝೋಲ್ ಮಾತ್ರೆ ನೀಡುವುದರಿಂದ ಹೊಟ್ಟೆ ಹುಳಗಳು ನಾಶವಾಗುತ್ತವೆ.

ಈ ಕಾರ್ಯಕ್ರಮದಲ್ಲಿ ಸರಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಸಿಯಲ್ ಸ್ಕೂಲ್, ಐಟಿಐ, ಟೆಕ್ನಿಕಲ್ ಇನ್‌ಸ್ಟಿಟ್ಯೂಟ್, ನರ್ಸಿಂಗ್ ಕಾಲೇಜು, ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಇಂಜಿನಿಯ ರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆಯಾಯ ಶಾಲೆ/ ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಅಂಗನವಾಡಿ ಮಕ್ಕಳಿಗೆ ಮತ್ತು ಶಾಲೆಯಿಂದ ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಆಲ್ಬೆಂಡಝೋಲ್ ಮಾತ್ರೆಗಳನ್ನು ನೀಡಲಾಗುತ್ತದೆ.

1ರಿಂದ 2 ವರ್ಷದೊಳಗಿನ ಮಕ್ಕಳಿಗೆ 1/2 ಮಾತ್ರೆ ಹಾಗೂ 2ರಿಂದ 19 ವರ್ಷದ ವಯಸ್ಸಿನವರಿಗೆ ಇಡೀ ಮಾತ್ರೆ ನೀಡಲಾಗುತ್ತದೆ. ಚಿಕ್ಕ ಮಕ್ಕಳಿಗೆ ಮಾತ್ರೆಯನ್ನು ಹುಡಿ ಮಾಡಿ ನೀರಿನೊಂದಿಗೆ ಸೇವಿಸಲು ಅಥವಾ ಚೀಪಿ ಸೇವಿಸುವಂತೆ ಕ್ರಮವಹಿಸಲು ತರಬೇತಿ ನೀಡಲಾಗಿದೆ.

ಆಗಸ್ಟ್ 10 ರಂದು ಬಿಟ್ಟು ಹೋದ ಮಕ್ಕಳಿಗೆ ಆ. 17ರ ಮೋಪ್ ಅಪ್ ದಿನದಂದು ಮಾತ್ರೆಗಳನ್ನು ನೀಡಲಾಗು ವುದು. ಸೌಖ್ಯವಿಲ್ಲದ ಮಕ್ಕಳಿಗೆ ಗುಣಮುಖರಾದ ಬಳಿಕ ಆಲ್ಬೆಂಡಝೋಲ್ ಮಾತ್ರೆ ನೀಡಲಾಗುವುದು. ಬೇರೆ ಯಾವುದೇ ಔಷಧಿ ಸೇವಿಸುತ್ತಿದ್ದರೆ ವೈದ್ಯರ ಸಲಹೆ ಪಡೆದು ಆಲ್ಬೆಂಡಝೋಲ್ ಮಾತ್ರೆಯನ್ನು ಸೇವಿಸಬೇಕು. ಆಶಾ ಕಾರ್ಯಕರ್ತೆಯರ ಮೂಲಕ ಶಾಲೆಯಿಂದ ಹೊರಗಿರುವ 1ರಿಂದ 19 ವರ್ಷದ ಒಳಗಿರುವ ಮಕ್ಕಳನ್ನು ಪಟ್ಟಿ ಮಾಡಿ ಪಟ್ಟಿಯಲ್ಲಿರುವ ಎಲ್ಲಾ ಮಕ್ಕಳನ್ನು ಅಂಗನವಾಡಿಗೆ ಬರುವಂತೆ ಮಾಡಿ ಮಾತ್ರೆ ನೀಡಲಾಗುತ್ತದೆ.

ನೈರ್ಮಲ್ಯತೆಯ ಕೊರತೆ, ವೈಯುಕ್ತಿಕ ಶುಚಿತ್ವದ ಕೊರತೆ ಹಾಗೂ ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವುದ ರಿಂದ ಜಂತುಹುಳ ಭಾದೆ ಬರುತ್ತದೆ. ಇದರಿಂದಾಗಿ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಸಾಮರ್ಥ್ಯದ ಮೇಲೆ ಪರಿಣಾಮ ಬೀರಲಿದ್ದು, ಜಂತುಹುಳ ಭಾದೆಯಿಂದಾಗಿ ಮಕ್ಕಳು ಹೆಚ್ಚಾಗಿ ರೋಗಗ್ರಸ್ತರಾಗಿ ಶಾಲೆಗಳಿಗೆ ಗೈರು ಹಾಜರಾಗುವುದು ಅಥವಾ ತರಗತಿಯಲ್ಲಿ ಪಾಠದ ಮೇಲೆ ಏಕಾಗ್ರತೆ ಸಾಧಿಸಲು ವಿಫಲರಾಗುತ್ತಾರೆ. ಮಕ್ಕಳ ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಕುಂಠಿತವಾಗಿ ಭವಿಷ್ಯದಲ್ಲಿ ಅವರ ಕೆಲಸ ಮಾಡುವ ಸಾಮರ್ಥ್ಯ ಕುಂಠಿತಗೊಳ್ಳುವ ಸಾದ್ಯತೆ ಇರುತ್ತದೆ.

ಜಂತುಹುಳ ಭಾದೆಯ ಲಕ್ಷಣಗಳು:ಯಾವ ಮಕ್ಕಳಲ್ಲಿ ಜಂತುಹುಳ ಸಂಖ್ಯೆ ಹೆಚ್ಚಿದೆಯೋ, ಆ ಮಕ್ಕಳಲ್ಲಿ ಹೊಟ್ಟೆ ನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತು, ತೂಕದಲ್ಲಿ ಇಳಿಕೆ, ವಾಕರಿಕೆ, ವಾಂತಿ, ರಕ್ತ ಹೀನತೆ ಇಂತಹ ಲಕ್ಷಣಗಳು ಕಂಡುಬರುತ್ತವೆ. ಜಂತುಹುಳ ಸಂಖ್ಯೆ ಕಡಿಮೆ ಇದ್ದವರಲ್ಲಿ ಯಾವುದೇ ತೊಂದರೆಗಳು ಕಾಣಿಸದಿರಲೂಬಹುದು.

ಜಂತುಹುಳ ಭಾದೆ ನಿವಾರಣೆಯ ಉಪಯೋಗಗಳು: ರಕ್ತಹೀನತೆಯನ್ನು ತಡೆಗಟ್ಟುವುದು, ಪೌಷ್ಠಿಕತೆಯಲ್ಲಿ ಸುಧಾರಣೆ, ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು, ಏಕಾಗ್ರತೆ, ಕಲಿಕೆಯ ಶಕ್ತಿ ಹಾಗೂ ಶಾಲಾ ಹಾಜರಾತಿ ಸುಧಾರಿಸುವುದು.

ಜಂತುಹುಳ ಭಾದೆಯಿಂದ ರಕ್ಷಿಸಿಕೊಳ್ಳಲು ಕೈಗಳ ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿ ಸ್ಚಚ್ಛವಾಗಿಡಬೇಕು. ಪಾದರಕ್ಷೆ ಧರಿಸಿ ಹೊರಗೆ ಓಡಾಡಬೇಕು. ಊಟ/ತಿಂಡಿ ಮಾಡುವ ಮೊದಲು ಹಾಗೂ ಶೌಚಾಲಯ ವನ್ನು ಬಳಸಿದ ನಂತರ ಕೈಗಳನ್ನು ಸಾಬೂನಿನಿಂದ ತೊಳೆಯಬೇಕು. ಶುದ್ಧೀಕರಿಸಿದ ನೀರನ್ನೇ ಕುಡಿಯಬೇಕು. ಹಣ್ಣು, ಹಂಪಲು, ತರಕಾರಿಗಳನ್ನು ಉಪಯೋಗಿಸುವ ಮುನ್ನ ಶುಧ್ಧ ನೀರಿನಿಂದ ತೊಳೆಯಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸುವುದರಿಂದ ಹಾಗೂ ಆಹಾರ ಪದಾರ್ಥಗಳನ್ನು ಮುಚ್ಚಿಡುವುದರಿಂದ ಜಂತುಹುಳು ಭಾದೆಯಿಂದ ರಕ್ಷಿಸಿಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News